ಬೀರೇನ್ ಸಿಂಗ್ ಸರ್ಕಾರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು,ಜು.೨೭- ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮಣಿಪುರದಲ್ಲಿ ಮೇ ೪ ರಂದು ಕುಕಿ ಜೋ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಸಂಪೂರ್ಣ ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿರುವ ದುಷ್ಕರ್ಮಿಗಳನ್ನು ತಕ್ಷಣವೇ ಗಲ್ಲು ಶಿಕ್ಷೆ ಗೊಳಪಡಿಸಬೇಕು.
೩ ತಿಂಗಳುಗಳಿಂದ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ವಿಫಲರಾಗಿರುವ ಮಣಿಪುರ ಬೀರೇನ್ ಸಿಂಗ್ ನೇತೃತ್ವದ ಸರ್ಕಾರವನ್ನು ತಕ್ಷಣವೇ ವಜಾಗೊಳಿಸಿ ರಾಷ್ಟ್ರಪತಿಯವರ ಆಡಳಿತವನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಫಲರಾಗಿರುವ ಮಣಿಪುರದ ಮುಖ್ಯಮಂತ್ರಿ ಬೀರೇನ್ ಸಿಂಗ್, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಹನುಮಂತಪ್ಪ ಕಾಕರಗಲ್, ಶಿವಪ್ಪ, ತುರುಮಂದಪ್ಪ ಕಟ್ಟಿಮನಿ,ರಂಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.