ಬೆಂಗಳೂರಲ್ಲಿ ಕಾವೇರಿ ಕಿಚ್ಚು: ಬೃಹತ್ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ‘ಬೆಂಗಳೂರು ಬಂದ್’ ನಡೆಸಲಾಗುತ್ತಿದ್ದು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಸೇರಿರುವ ಸಾವಿರಾರು ಮಂದಿ ಕನ್ನಡ ಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು.

ಬೆಂಗಳೂರು,ಸೆ.೨೬-ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಜೆಸಿರಸ್ತೆಯ ಪುರಭವನದಿಂದ ಫ್ರೀಡಂ ಪಾರ್ಕ್‌ವರೆಗೆ ಬೃಹತ್ ಪ್ರತಿಭಟನೆ ನಡೆಸಿದರು. ದಾರಿಯುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದರು.
ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವುದನ್ನು ಲೆಕ್ಕಿಸದೇ ಸಾವಿರಾರು ರೈತರು,ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಳಗ್ಗೆ ಬೀದಿಗಿಳಿದು ಪುರಭವನದ ಬಳಿ ಸಮಾವೇಶಗೊಂಡರು.ಪುರಭವನದಿಂದ ಫ್ರೀಡಂ ಪಾರ್ಕ್‌ವರೆಗೂ ಸಾವಿರಾರು ಮಂದಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಹೊರಟರು.
ಪ್ರತಿಭಟನಾ ಮೆರವಣಿಗೆ ಹೊರಟ ಸಾವಿರಾರು ಮಂದಿಯನ್ನು ಪೊಲೀಸರು ಮಾರ್ಗ ಮಧ್ಯದಲ್ಲಿ ಬಂಧಿಸಿ ಬಸ್ ಗಳಲ್ಲಿ ಕರೆದೊಯ್ದು ಬಳಿಕ ಬಿಡುಗಡೆ ಮಾಡಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸಿದಿರುವುದನ್ನು ಖಂಡಿಸಿ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದರು. ಬೇಕೇ ಬೇಕು ನ್ಯಾಯಬೇಕು ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದದರು. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ಈ ವೇಳೆ ಕೆಲಕಾಲ ಹೈಡ್ರಾಮ ನಡೆಯಿತು. ಅಂತಿಮವಾಗಿ ಬಿಎಂಟಿಸಿ ಬಸ್‌ಗಳಲ್ಲಿ ಮೂಲಕ ಪ್ರತಿಭಟನಾಕಾರರನ್ನು ಪೊಲೀಸರು ಕರೆದುಕೊಂಡು ಹೋದರು.
ಇದಕ್ಕೂ ಮುನ್ನ ಪ್ರತಿಭಟನಾಕಾರರೊಬ್ಬರು ಮಾತನಾಡಿ, ”ಕಾವೇರಿ ಹೋರಾಟ ನಿಲ್ಲೋದಿಲ್ಲ. ಸರ್ಕಾರ ಜನರ ಕಿವಿ ಮೇಲೆ ಹೂ ಇಡುತ್ತಿದೆ. ರಾಜ್ಯದಲ್ಲಿ ನಮಗೇ ನೀರಿಲ್ಲ. ಇಂಥ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಟ್ಟಿರುವುದು ಸರಿಯಲ್ಲ. ಮೈಸೂರು ರಸ್ತೆಯ ಸ್ಯಾಟ್ ಲೈಟ್ ಬಸ್ ನಿಲ್ದಾಣದಿಂದ ಟೌನ್ ಹಾಲ್‌ವರೆಗೆ ಬಂದಿದ್ದೇವೆ. ಇಲ್ಲಿಂದ ಫ್ರೀಡಂ ಪಾರ್ಕ್‌ಗೆ ಹೋಗಲಿದ್ದೇವೆ ಅದಕ್ಕೆ ನಾವೂ ಹೂ ಇಟ್ಟುಕೊಂಡು ಪ್ರತಿಭಟನೆ ಮಾಡೋಕೆ ಬಂದಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು

ಕೇಂದ್ರ ಮಧ್ಯ ಪ್ರವೇಶಿಸಲಿ
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಗ್ರಹಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಸರ್ಕಾರದ ಪರವಾಗಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ, ರಾಜ್ಯದ ರೈತರ ಹಿತರಕ್ಷಣೆಗೆ ಬದ್ಧರಾಗಿರುವುದಾಗಿ ಭರವಸೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಂಗಳೂರಿಗೆ ವಾಪಸ್ ಬಂದ ಬಳಿಕ ಮೂರು ದಿನದಲ್ಲಿ ಸಭೆ ಕರೆಯುವುದಾಗಿ ಹೇಳಿದರು.
ಮೇಕೆದಾಟು ಯೋಜನೆಗೆ ಸರ್ಕಾರ ಬದ್ಧವಾಗಿದ್ದು, ಈ ಹಿಂದೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸಿತ್ತು ಎಂದು ಅವರು ಹೇಳಿದರು.