ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ:ಹಲವೆಡೆ ಟ್ರಾಫಿಕ್ ಜಾಮ್

ಇಂದು ಮುಂಜಾನೆಯಿಂದಲೇ ನಗರದಲ್ಲಿ ಜಿಟಿ ಜಿಟಿ ಮಳೆ ಪ್ರಾರಂಭವಾಗಿದ್ದು, ಯುವತಿಯೊಬ್ಬಳು ತಲೆ ಮೇಲೆ ಪ್ಲಾಸ್ಟಿಕ್ ಕವರ್ ಹಾಕಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದು.

ಬೆಂಗಳೂರು,ಜೂ.೨೦-ಬೆಂಗಳೂರು ನಗರದ ಹಲವೆಡೆ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆರಾಯ ಇಂದು ತಂಪೆರೆದಿದ್ದಾನೆ. ಕಳೆದ ಎರಡು ದಿನಗಳಿಂದ ಮೋಡ ಮುಸುಕಿದ ವಾತಾವರಣ ಕಂಡುಬಂದಿದ್ದರೂ ಮಳೆಯಾಗಿರಲಿಲ್ಲ. ನಿನ್ನೆ ರಾತ್ರಿಯಿಂದಲೇ ಜಿಟಿ ಜಿಟಿ ಮಳೆಯಾಗಿತ್ತು. ಇಂದು ಬೆಳಿಗ್ಗೆಯೂ ಮೋಡ ಕವಿದ ಕಂಡು ಬಂದಿದ್ದು, ಬೆಳಿಗ್ಗೆಯಿಂದಲೇ ಬೆಂಗಳೂರಿನಾದ್ಯಂತ ಮಳೆ ಸುರಿದಿದೆ. ಇದರಿಂದಾಗಿ ಹಲವೆಡೆ ಟ್ರಾಫಿಕ್ ಸಮಸ್ಯೆ ಎದುರಾಗಿ ವಾಹನ ಸವಾರರು ಪರದಾಡುವಂತಾಯಿತು.
ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ಕಾರ್ಪೋರೇಶನ್ ವೃತ್ತ, ಶಿವಾಜಿನಗರ, ಕೆ.ಆರ್. ಮಾರ್ಕೆಟ್, ಮೈಸೂರು ರಸ್ತೆ, ಮಾಗಡಿ ರಸ್ತೆ, ವಿಜಯನಗರ, ಜೆ.ಪಿ. ನಗರ, ಜಯನಗರ, ಶಿವಾನಂದ ವೃತ್ತ, ಮೇಖ್ರಿ ಸರ್ಕಲ್, ಬಸವನಗುಡಿ, ಹೆಬ್ಬಾಳ, ಯಲಹಂಕ, ಶ್ರೀನಗರ, ಆರ್.ಟಿ ನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ.
ಕಚೇರಿ, ಶಾಲಾ ಕಾಲೇಜು ಹಾಗೂ ದಿನನಿತ್ಯದ ಕೆಲಸಗಳಿಗೆ ತೆರಳುವ ಸಂದರ್ಭದಲ್ಲೇ ಮಳೆ ಸುರಿದಿದ್ದರಿಂದ ವಾಹನ ಸವಾರರಿಗೆ ಕಿರಿ ಕಿರಿ ಉಂಟಾಯಿತು. ಬಹುತೇಕ ಭಾಗಗಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಮಂದಗತಿಯಲ್ಲಿ ಸಾಗುತ್ತಿರುವ ದೃಶ್ಯ ಕಂಡು ಬಂದಿತು. ಕೆಲವರು ಮಳೆಯಲ್ಲೇ ನೆನೆದುಕೊಂಡು ತಮ್ಮ ನಿತ್ಯದ ಕೆಲಸಗಳಿಗೆ ತೆರಳುತ್ತಿದ್ದರೆ. ಮತ್ತೆ ಕೆಲವರು ಕೊಡೆಗಳನ್ನು ಹಿಡಿದು ಮಳೆಯಲ್ಲೇ ಸಾಗುತ್ತಿದ್ದರು.ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು.
ರಾಜಧಾನಿ ಬೆಂಗಳೂರಿನ ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಲಗ್ಗೆರೆ, ರಾಜರಾಜೇಶ್ವರಿ ನಗರ, ಯಶವಂತಪುರ, ಲಾಲ್ ಬಾಗ್, ವಿಧಾನಸೌಧ ಭಾಗಗಳಲ್ಲಿ ಜೋರು ಮಳೆಯಾಗಿದೆ.ಮಳೆಯಿಂದಾಗಿ ಹಲವು ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡಿದರು. ಜತೆಗೆ, ಮಳೆಯಿಂದ ಕೆಲಸಕ್ಕೆ ತೆರಳುವವರಿಗೆ ಸಮಸ್ಯೆಯಾಗಿದೆ.ಇನ್ನೂ, ಜನ ಛತ್ರಿ ಹಿಡಿದು ಓಡಾಡುತ್ತಿದ್ದರೆ, ಕೆಲವೆಡೆ ದ್ವಿಚಕ್ರ ವಾಹನ ಸವಾರರು ನೆನೆದುಕೊಂಡೇ ಹೋಗುತ್ತಿದ್ದ ದೃಶ್ಯ ಕಂಡು ಬಂತು.
ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದರಿಂದ ಬರ ಪರಿಸ್ಥಿತಿ ತಲೆದೂರುವ ಭೀತಿ ಎದುರಾಗಿತ್ತು. ಆದರೆ ಈಗ ರಾಜ್ಯದಲ್ಲಿ ಇಂದು ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ ಆಶಾಭಾವನೆ ಮೂಡಿಸಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ ಹಾಗೂ ಮಧ್ಯ ಕರ್ನಾಟಕದ ಕೆಲ ಭಾಗಗಳಲ್ಲಿ ಮಳೆ ಬೀಳುತ್ತಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಡೆ ಮಳೆ ಮುಂದುವರಿಕೆ..!
ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಸೇರಿದಂತೆ ಎಲ್ಲೆಡೆ ಮಳೆ ಅಬ್ಬರ ಜೋರಾಗಿದೆ.
ಬೆಳಗ್ಗೆಯೇ ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಿದ್ದು, ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ ಬೀಳುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.