ಬೆಂಗಳೂರು ಲಾಕ್‌ಡೌನ್ ನಾಳೆ ಸಂಪುಟ ಸಭೆಯಲ್ಲಿ ತೀರ್ಮಾನ

Nayandanahalli, Mysore road

ಬೆಂಗಳೂರು,ಏ.೨೫- ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ನಿತ್ಯ ಏರಿಕೆಯಾಗುತ್ತಿದ್ದು, ಸೋಂಕಿನ ಸುನಾಮಿಯನ್ನು ನಿಯಂತ್ರಿಸಲು ಬೆಂಗಳೂರು ನಗರದಲ್ಲಿ ೧೪ ದಿನಗಳ ಸಂಪೂರ್ಣ ಲಾಕ್‌ಡೌನ್‌ಗೆ ತಜ್ಞರು ಶಿಫಾರಸ್ಸು ಮಾಡಿದ್ದು, ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನವಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮಿತಿ ಮೀರುತ್ತಿರುವ ಕೋವಿಡ್ ನಿಯಂತ್ರಣಕ್ಕೆ ೧೪ ದಿನಗಳ ಲಾಕ್‌ಡೌನ್ ಅಗತ್ಯ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವರುಗಳ ಅಭಿಪ್ರಾಯಗಳನ್ನು ಆಲಿಸಿ ಲಾಕ್‌ಡೌನ್ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಹೇಳಲಾಗಿದೆ.
ವಾರಾಂತ್ಯ ಕರ್ಫ್ಯೂ ಮಾದರಿಯಲ್ಲೇ ವೆಂಗಳೂರಿನಲ್ಲಿ ೧೪ ದಿನಗಳ ಲಾಕ್‌ಡೌನ್ ಅವಶ್ಯ. ಇದರಿಂದ ಕೊರೊನಾ ಸರಪಳಿಯನ್ನು ತುಂಡರಿಸಬಹುದು. ಹಾಗಾಗಿ, ೧೪ ದಿನಗಳ ಲಾಕ್‌ಡೌನ್‌ಗೆ ಶಿಫಾರಸ್ಸು ಮಾಡಿರುವುದಾಗಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ಗಿರಿಧರ್‌ಬಾಬು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸಂಪೂರ್ಣ ಲಾಕ್‌ಡೌನ್‌ನಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಒಲವು ತೋರಿಲ್ಲ. ಈಗಲೇ ಲಾಕ್‌ಡೌನ್ ತೀರ್ಮಾನ ಬೇಡ, ಈಗಿರುವ ಮಾರ್ಗಸೂಚಿಗಳು ಮೇ ೪ರವರೆಗೂ ಜಾರಿಯಲ್ಲಿರುತ್ತವೆ, ಬಳಿಕ ಪರಿಸ್ಥಿತಿ ಆಧರಿಸಿ ಲಾಕ್‌ಡೌನ್ ಬಗ್ಗೆ ತೀರ್ಮಾನ ಮಾಡೋಣ ಎಂದು ಈ ಇಬ್ಬರು ಸಚಿವರು ನಿನ್ನೆ ರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಸಲಹೆಗಳನ್ನು ಸಚಿವ ಸಂಪುಟದಲ್ಲಿ ಹೇಳುತ್ತೇನೆ ಎಂದು ಹೇಳಿದ್ದಾರೆ. ಹಾಗಾಗಿ ಸಚಿವ ಸಂಪುಟ ಸಭೆಯಲ್ಲಿ ಲಾಕ್‌ಡೌನ್ ಬಗ್ಗೆ ಸಮಗ್ರವಾಗಿ ಚರ್ಚಿಸಿ ನಾಳೆ ಸರ್ಕಾರ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲಿದೆ.