ಬೆಲೆಯೇರಿಕೆ ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ನವದೆಹಲಿ, ಜು. ೧೯-ದೇಶದಲ್ಲಿ ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಮೇಲಿನ ಶೇಕಡಾ ೫ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಹಾಗು ಇತರೆ ಪಕ್ಷದ ನಾಯಕರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿವೆ.
ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ವೇಣುಗೋಪಾಲ್, ಅಧೀರ್ ರಂಜನ್ ಚೌಧರಿ ಮತ್ತು ಶಿವಸೇನಾ ಸಂಸದ ಪ್ರಿಯಾಂಕಾ ಚತುರ್ವೇದಿ ಸೇರಿದಂತೆ ಇತರ ಕಾಂಗ್ರೆಸ್ ಸಂಸದರೊಂದಿಗೆ ಧರಣಿ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಕೆಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡ ಜನರಿಗೆ ಬರೆ ಹಾಕಲಾಗಿದೆ. ಹಣದುಬ್ಬರ ಹಾಗೂ ಜಿಎಸ್‌ಟಿ ದರ ಏರಿಕೆ ವಿರುದ್ಧ ಹೋರಾಟ ನಡೆಸುವುದಾಗಿ ಹೇಳಿದ್ದಾರೆ.
ಪ್ರತಿಪಕ್ಷಗಳು ಒಂದೆಡೆ ಸೇರಿ ಕೆಲವು ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ಮತ್ತು ಜಿಎಸ್‌ಟಿ ದರ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಸಂಸತ್ತಿನ ಒಳಗೂ ನಾವು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಮಾತನಾಡಿ, ೫೩ ವರ್ಷಗಳ ಹಿಂದೆ, ಬ್ಯಾಂಕ್‌ಗಳನ್ನು ರಾಷ್ಟ್ರೀಕರಣಗೊಳಿಸಲಾಯಿತು, ಇದು ಪರಿವರ್ತನೆಯ ಬದಲಾವಣೆಯಾಗಿದೆ. ಈಗ, ಮೋದಿ ಸರ್ಕಾರ ಖಾಸಗೀಕರಣದ ಭರಾಟೆಯಲ್ಲಿದೆ, ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಸ್ಪರ್ಧೆಯನ್ನು ಎದುರಿಸಲು ಸಜ್ಜುಗೊಳಿಸಬೇಕು ಎಂದಿದ್ದಾರೆ.
ಪ್ರಧಾನಿ ಸಭೆ:
ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹಿರಿಯ ಸಚಿವರ ಸಭೆ ನಡೆಯಿತು.
ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರ ಸಮರ್ಥನೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದ್ದಾರೆ.