ಬೆಲೆ ಏರಿಕೆ, ದೌರ್ಜನ್ಯ ಪ್ರಕರಣ ಹೆಚ್ಚಳ ವಿರೋಧಿಸಿ ಆರ್‍ಪಿಐ ಧರಣಿ

ಕಲಬುರಗಿ.ಸೆ.21: ಬೆಲೆ ಏರಿಕೆ ಹಾಗೂ ದಲಿತ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಪ್ರಕರಣಗಳ ಹೆಚ್ಚಳ ಖಂಡಿಸಿ ಸೆಪ್ಟೆಂಬರ್ 23ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ರಾಜ್ಯ ಘಟಕದ ಅಧ್ಯಕ್ಷ ಎ.ಬಿ. ಹೊಸಮನಿ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಹಾಗೂ ದೌರ್ಜನ್ಯ ಪ್ರಕರಣಗಳನ್ನು ತಡೆಯುವಲ್ಲಿ ಸಂಪೂರ್ಣ ವಿಫಲಗೊಂಡಿವೆ ಎಂದು ಆರೋಪಿಸಿದರು.
ಜನಸಾಮಾನ್ಯರು ಬಳಸುವ ಡೀಸೆಲ್, ಪೆಟ್ರೋಲ್ ಹಾಗೂ ಅಡಿಗೆ ಅನಿಲ ದರಗಳನ್ನು ಪದೇ ಪದೇ ಹೆಚ್ಚಿಸಲಾಗುತ್ತಿದೆ. ಇದರಿಂದ ಸಾಮಾನ್ಯ ಹಾಗೂ ಬಡವರ ಕುಟುಂಬಗಳು ತಮ್ಮ ಜೀವನ ನಡೆಸಲು ಕಷ್ಟಕರವಾಗುತ್ತಿದೆ. ಇದರಿಂದಾಗಿ ಇನ್ನಿತರ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ನಗರದಲ್ಲಿ ಕೊಲೆ, ಸುಲಿಗೆ ಹಾಗೂ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕ ವಲಯದಲ್ಲಿ ಆತಂಕವುಂಟಾಗಿದೆ. ನಗರ ಪೋಲಿಸ್ ಆಯುಕ್ತಾಲಯವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮೂಲಕ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಬೇಕು ಎಂದು ಅವರು ಒತ್ತಾಯಿಸಿದರು.
ಆಳಂದ್ ತಾಲ್ಲೂಕಿನ ದರ್ಗಾ ಶಿರೂರಿನಲ್ಲಿ ದಲಿತ ವ್ಯಕ್ತಿಗೆ ಮಾರಣಾಂತಿಕ ಹಲ್ಲೆಯಾಗಿದೆ. ಆದಾಗ್ಯೂ, ಇಲ್ಲಿಯವರೆಗೆ ಪೋಲಿಸರು ಪ್ರಕರಣ ದಾಖಲಿಸಿಲ್ಲ. ಕೂಡಲೇ ಪ್ರಕರಣ ದಾಖಲಿಸುವ ಮೂಲಕ ತಪ್ಪಿತಸ್ಥರಿಗೆ ಕಾನೂನಿನ ಅಡಿ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಅವರು, ಪಲ್ಲಕ್ಕಿ ಉತ್ಸವದಲ್ಲಿ ದಲಿತ ಯುವಕನ ಮೇಲೆ ಹಲ್ಲೆ ಮಾಡಿದವರ ಮೇಲೆಯೂ ಸಹ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಕೂಡಲೇ ಆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ ಅವರು, ಮದ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಸಂಗಾವಿ ಗ್ರಾಮದಲ್ಲಿ ಎಸ್‍ಸಿ, ಎಸ್‍ಟಿ ಬಡಾವಣೆಗಳಲ್ಲಿ ಸಿಸಿ ರಸ್ತೆ, ಒಳಚರಂಡಿ ನಿರ್ಮಿಸುವುದೂ ಸೇರಿದಂತೆ ಕೋಗನೂರ್ ಗ್ರಾಮದಲ್ಲಿ ದಲಿತರಿಗೆ ಸ್ಮಶಾನಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ನಕಲಿ ಬೇಡ ಜಂಗಮ ಪ್ರಮಾಣಪತ್ರಕ್ಕಾಗಿ ಬೆಂಗಳೂರಿನಲ್ಲಿ ಅನಿರ್ಧಿಷ್ಟ ಹೋರಾಟ ಮಾಡುತ್ತಿದ್ದು, ಯಾವುದೇ ಕಾರಣಕ್ಕೂ ಸರ್ಕಾರವು ಅವರ ಬೇಡಿಕೆಗೆ ಸ್ಪಂದಿಸಬಾರದು ಎಂದು ಆಗ್ರಹಿಸಿದ ಅವರು, ಅತಿವೃಷ್ಟಿಯಿಂದ ಆದ ಬೆಳೆ ಹಾನಿಯ ಪರಿಹಾರವನ್ನು ತ್ವರಿತಗತಿಯಲ್ಲಿ ಕೊಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹುಸೇನ್ ಬಾಬಾ, ಯಮನಪ್ಪ ಪ್ರಸಾದ್, ಮಿಲಿಂದ್ ಕಣ್ಮಸ್, ಮಹಾದೇವ್ ಅನವರಕರ್ ಮುಂತಾದವರು ಉಪಸ್ಥಿತರಿದ್ದರು.