ಬೆಳಗಾವಿ ಉಪಸಮರಕ್ಕೆ ಕ್ಷಣಗಣನೆ

ಹುಬ್ಬಳ್ಳಿ, ಏ೧೬- ನಾಳೆ ದಿ. ೧೭ ರಂದು ನಡೆಯುವ ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ.

ಬೆಳಗಾವಿ ಉತ್ತರ ವಿಭಾನಸಭಾ ಕ್ಷೇತ್ರದಲ್ಲಿ ಒಟ್ಟು ೨,೪೨,೬೧೮ ಮತದಾರರಿದ್ದು, ಇಲ್ಲಿ ೩೪೦ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು ೨,೪೩,೦೨೭ ಮತದಾರರಿದ್ದು, ಇಲ್ಲಿ ೩೩೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಮತದಾನ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿ, ಮತಯಂತ್ರಗಳ ವ್ಯವಸ್ಥೆ ಮಾಡಿದ್ದು, ಪ್ರತಿ ಮತಗಟ್ಟೆಗಳಲ್ಲೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ ಒದಗಿಸಲಾಗಿದೆ.

ಕೋವಿಡ್ ಮಾರ್ಗಸೂಚಿ ಪಾಲನೆ:
ಮತಗಟ್ಟೆ ಸೇರಿದಂತೆ ಮತದಾನ ಪ್ರಕ್ರಿಯೆ ನಡೆಯುವ ಎಲ್ಲ ಕಡೆಗಳಲ್ಲಿ ಸ್ಯಾನಿಟೈಸೆಷನ್ ಮಾಡಲಾಗುತ್ತಿದ್ದು, ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ತೆಗೆದುಕೊಂಡಿದೆ.

ಚುನಾವಣಾ ಆಯೋಗದ ನಿರ್ದೇಶನ ಹಾಗೂ ಕೋವಿಡ್-೧೯ ಮಾರ್ಗಸೂಚಿ ಕಡ್ಡಾಯ ಪಾಲಿಸುವುದರಿಂದ ಸೋಂಕು ಹರಡುವಿಕೆಯ ಬಗ್ಗೆ ಯಾವುದೇ ಆತಂಕವಿಲ್ಲದೆ ನಿರ್ಭೀತಿಯಿಂದ ಮತದಾರರು ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ ತಿಳಿಸಿದ್ದಾರೆ.

ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ ಹಾಗೂ ಅಂತರ ಕಾಯ್ದುಕೊಳ್ಳುವಿಕೆ ಕುರಿತು ಈಗಾಗಲೇ ತರಬೇತಿ ನೀಡಲಾಗಿದ್ದು ಮತದಾನದ ದಿನ ಅಗತ್ಯವಿರುವ ಸಾಮಗ್ರಿಗಳನ್ನು ಪೂರೈಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮತದಾನ ಸಮಯದಲ್ಲಿ ಕೋವಿಡ್ ನಿಯಮ ಪಾಲನೆಗೆ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರತಿ ಮತಗಟ್ಟೆ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ಕಡ್ಡಾಯವಾಗಿ ನೇಮಕ ಮಾಡಲಾಗಿದೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಕೆ.ಹೆಚ್. ಜಗದೀಶ ತಿಳಿಸಿದರು.