ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ರೈತರ ಆಗ್ರಹ

ಲಕ್ನೋ,ನ.೨೨- ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಹೋರಾಟ ನಡೆಸಿ ಯಶಸ್ವಿಯಾದ ರೈತ ನಾಯಕರು ಇದರ ಬೆನ್ನಲ್ಲೇ ಬಾಕಿ ಉಳಿದಿರುವ ಕಬ್ಬು ಬೆಳೆಗಾರರಿಗೆ ಹಣ ಪಾವತಿ ,ಕನಿಷ್ಠ ಬೆಂಬಲ ಬೆಲೆ ಖಾತರಿ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲು ಮುಂದಾಗಿದ್ದಾರೆ.ಉತ್ತರಪ್ರದೇಶದ ಲಖೀಂಖೇರಿ ಪ್ರಕರಣಕ್ಕೆ ಸಂಬಂ ಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ಮತ್ತು ಹಲವು ದಿನಗಳಿಂದ ಕಬ್ಬು ಬೆಳೆಗಾರರಿಗೆ ಬಾಕಿ ಇರುವ ೪,೦೦೦ ಕೋಟಿ ರೂಪಾಯಿ ಹಣ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು, ವಿವಿಧ ರೈತಸಂಘಟನೆಗಳು, ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಅಡಿ ದೇಶಾದ್ಯಂತ ಹೋರಾಟ ನಡೆಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು, ದೇಶಾದ್ಯಂತ ಕಬ್ಬು ಬೆಳೆಗಾರರಿಗೆ ಬಾಕಿ ನೀಡಬೇಕಾಗಿರುವ ೪೦೦೦ ಕೋಟಿ ರೂಪಾಯಿ ಹಣವನ್ನು ತಕ್ಷಣ ಬಿಡುಗಡೆ ಮಾಡುವುದು ಆಲೂಗಡ್ಡೆ ಬೆಳೆಗಾರರ ರಕ್ಷಣೆ ಮಾಡುವುದು ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಘೋಷಿಸಿದ್ದರೂ ಅದರ ಪ್ರಕ್ರಿಯೆ ಸಂಸತ್ನಲ್ಲಿ ಪೂರ್ಣಗೊಳ್ಳುವ ತನಕ ರೈತರು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.

ವಿದ್ಯುತ್ ಬಿಲ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ ಅದನ್ನು ಕೂಡ ವಾಪಸ್ ಪಡೆಯುವಂತೆ ಆಗ್ರಹಿಸುವುದಾಗಿ ಹೇಳಿದ್ದಾರೆ. ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ೭೫೦ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಅವರಿಗೆ ಪರಿಹಾರ ನೀಡುವಂತೆ ಒತ್ತಡ ಹೇರುವುದಾಗಿ ಅವರು ತಿಳಿಸಿದ್ದಾರೆ.

ರೈತರ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಯುಕ್ತ ಕಿಸಾನ್ ವರ್ಷ ಮುಂದಿನ ದಿನಗಳಲ್ಲಿ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ದೇಶದ ಎಲ್ಲ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗುವುದು ಅದು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ ಮಾಡಲಾಗುವುದು ಎಂದು ಹೇಳಿದ್ದಾರೆ.