
ಬ್ಯಾಡಗಿಫೆ.26: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ಸಂಘ ನೀಡಿದ ಕರೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಮಾರ್ಚ್ 1ರಿಂದ ತಾಲೂಕಿನ ಎಲ್ಲಾ ಸರ್ಕಾರಿ ನೌಕರರು ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ಅಧ್ಯಕ್ಷ ಎಂ.ಎಫ್.ಕರಿಯಣ್ಣನವರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಫೆಬ್ರುವರಿ 17ರಂದು ಮಂಡಿಸಿದ ರಾಜ್ಯದ ಪ್ರಸಕ್ತ 2023-24ನೇ ಸಾಲಿನ ಬಜೆಟ್‍ನಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆ ಸಂಬಂಧಿಸಿದಂತೆ ಸರ್ಕಾರವು ಯಾವುದೇ ಪ್ರಸ್ತಾಪವನ್ನು ಮಾಡದಿರುವುದು ಸರ್ಕಾರಿ ನೌಕರರಲ್ಲಿ ಬಹಳಷ್ಟು ನಿರಾಶೆಯನ್ನುಂಟು ಮಾಡಿದೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು 2022 ಜುಲೈ 1ರಿಂದ ಜಾರಿಗೊಳಿಸಬೇಕಾಗಿತ್ತು. ಆದರೆ ಸರ್ಕಾರ ಇದುವರೆಗೂ ಜಾರಿಗೊಳಿಸಿಲ್ಲ ಎಂದು ಆಪಾದಿಸಿದರು.
ಅಲ್ಲದೇ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದೆ. ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು, ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯವಾಗಿದೆ. ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ಫೆ.28ರವರೆಗೆ ಗಡುವು ನೀಡಿದ್ದೇವೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೇ ಮಾ.1ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅಸಹಕಾರ ಚಳವಳಿ ನಡೆಸಲಾಗುವುದು ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.