ಬೇನಾಮಿ ಆಸ್ತಿ ಆರೋಪಕ್ಕೆ ಜನರೇ ಉತ್ತರಿಸುತ್ತಾರೆ – ಪಿಟಿಪಿ


ಸಂಜೆವಾಣಿ ವಾರ್ತೆ
ಹೂವಿನಹಡಗಲಿ, ಮಾ.14: ಮಾಜಿ ಸಂಸದ ಕೆ.ಸಿ.ಕೊಂಡಯ್ಯ ಅವರು ನನ್ನ ವಿರುದ್ಧ ಮಾಡಿರುವ ಬೇನಾಮಿ ಆಸ್ತಿ ಆರೋಪಕ್ಕೆ ಚುನಾವಣೆಯಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು.
ಪಟ್ಟಣದಲ್ಲಿ ಕಾಂಗ್ರೆಸ್ ಚುನಾವಣಾ ಭರವಸೆಗಳ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಂಡಯ್ಯನವರ ಆರೋಪಗಳಿಗೆ ಪ್ರತಿಕ್ರಿಯಿಸದಂತೆ ಪಕ್ಷದ ವರಿಷ್ಠರು ಸೂಚನೆ ನೀಡಿರುವ ಕಾರಣ ಈ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಸೂಕ್ತ ಸಂದರ್ಭದಲ್ಲಿ ಅವರ ಎಲ್ಲ ಆರೋಪಗಳಿಗೆ ಉತ್ತರಿಸುತ್ತೇನೆ ಎಂದರು.
ಕ್ಷೇತ್ರದ ಜನರಿಗೆ ನಾನು ಏನು ಎಂಬುದು ಕ್ಷೇತ್ರದ ತಿಳಿದಿದೆ. ನಾನು ಬೇನಾಮಿ ಆಸ್ತಿ ಮಾಡಿದ್ದೇನೆಯೋ ಅಥವಾ ಕ್ಷೇತ್ರದ ಅಭಿವೃದ್ಧಿಗೆ ದುಡಿದಿದ್ದೇನೆಯೋ ಎಂಬುದು ಕ್ಷೇತ್ರದ ಮತದಾರರಿಗೆ ಗೊತ್ತಿದೆ. ಇಂತಹ ಆರೋಪಗಳಿಗೆ ಮುಂಬರುವ ಚುನಾವಣೆಯಲ್ಲಿ ಮತದಾರರೇ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಯಿಂದ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಬಡವರು ಜೀವನ ಸಾಗಿಸಲು ಕಷ್ಟವಾಗಿದ್ದು, ಕಾಂಗ್ರೆಸ್ ಪಕ್ಷ ಇದಕ್ಕೆ ಸ್ಪಂದಿಸಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮನೆಯೊಡತಿಗೆ ಪ್ರತಿ ತಿಂಗಳು 2000 ರೂ. ನೀಡುವ ಯೋಜನೆ ಜಾರಿ ಮಾಡಲಿದ್ದೇವೆ. ಪ್ರತಿ ಕುಟುಂಬಕ್ಕೆ 200 ಯುನಿಟ್ ವಿದ್ಯುತ್ ಉಚಿತ, ಬಿಪಿಎಲ್ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡುವ ಭರವಸೆಯೊಂದಿಗೆ ಈ ಗ್ಯಾರಂಟಿ ಕಾರ್ಡ್ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಜಿಎಸ್‍ಟಿ ಗೊಂದಲದಿಂದ ಅನಗತ್ಯವಾಗಿ ಸಾರ್ವಜನಿಕರಿಗೆ ಹೊರೆಯಾಗುತ್ತಿದ್ದು, ಇದನ್ನು ತಪ್ಪಿಸಿ ಏಕರೂಪದ ಜಿಎಸ್‍ಟಿ ಜಾರಿಗೆ ತರಲು ಕಾಂಗ್ರೆಸ್ ಪಕ್ಷ ಚಿಂತನೆ ನಡೆಸಿದೆ ಎಂದು ಹೇಳಿದರು.
ಪ್ರಸಕ್ತ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡುವ ವಿಚಾರ ಹೈ ಕಮಾಂಡ್‍ಗೆ ಬಿಟ್ಟಿದ್ದು, ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡಿರುವುದರಿಂದ ಹೊಸ ಪದಾಧಿಕಾರಿಗಳ ನೇಮಿಸುವ ತೀರ್ಮಾನವನ್ನು ಕೆಪಿಸಿಸಿ ಕೈಗೊಳ್ಳಲಿದೆ ಎಂದು ತಿಳಿಸಿದರು.
ಪುರಸಭೆ ಅಧ್ಯಕ್ಷ ಜ್ಯೋತಿ ಮಲ್ಲಣ್ಣ, ಉಪಾಧ್ಯಕ್ಷ ಎಸ್.ತಿಮ್ಮಣ್ಣ, ಮುಖಂಡರಾದ ಅಟವಾಳಗಿ ಕೊಟ್ರೇಶ, ಬಿ.ಹನುಮಂತಪ್ಪ, ಬಸವನಗೌಡ ಪಾಟೀಲ, ಗುರುವಿನ ರಾಜು, ಸೋಗಿ ಹಾಲೇಶ, ಬಿ.ಎಲ್.ಶ್ರೀಧರ, ಚಂದ್ರನಾಯ್ಕ, ಶಿವಕುಮಾರಗೌಡ ಇದ್ದರು.