ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸಲು ಕರೆ

ಕೋಲಾರ,ಏ.೨೯:ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರವನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ೧೫ ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಶಿಬಿರದಲ್ಲಿ ಮಕ್ಕಳಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳನ್ನು ಕಲಿಸಿಕೊಡಲಾಗುವುದು ಮಕ್ಕಳ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ ಎಂ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸೊಸೈಟಿ ವತಿಯಿಂದ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ ೫ ರಿಂದ ೧೬ ವರ್ಷದ ಮಕ್ಕಳಿಗೆ ಜಿಲ್ಲಾ ಮಟ್ಟದ ಉಚಿತ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ಮಕ್ಕಳು ಶಿಬಿರಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಚಟುವಟಿಕೆಗಳನ್ನು ಕಲಿತು ಸಮಾರೋಪ ಸಮಾರಂಭದಲ್ಲಿ ಪ್ರತಿಯೊಂದು ಮಗು ಪ್ರದರ್ಶನ ನೀಡುವಂತೆ ಮಕ್ಕಳಿಗೆ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಕಾರ್ಯಕ್ರಮವನ್ನು ಉತ್ತಮ ಪರಿಸರದಲ್ಲಿ ಹಾಗೂ ಹೊರಾಂಗಣದಲ್ಲಿ ಆಯೋಜಿಸಿರುವುದು ಮಕ್ಕಳ ಬೆಳವಣಿಗೆಗೆ ಉಪಯುಕ್ತಕರವಾಗಿದೆ. ಬೇಸಿಗೆಯಲ್ಲಿ ಮಕ್ಕಳ ಹೊರಗೆ ಹೋಗುವುದನ್ನು ತಪ್ಪಿಸಿ ಇಂತಹ ಶಿಬಿರಗಳಲ್ಲಿ ಕಲಿಸುವ ಚಟುವಟಿಕೆಗಳನ್ನು ಶೀಘ್ರವಾಗಿ ಕಲಿತು ಪ್ರತಿಭಾ ಕಾರಂಜಿಗಳಲ್ಲಿ ಪ್ರದರ್ಶಿಸುವಂತೆ ಮಕ್ಕಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ವಂಶಿಕೃಷ್ಣ, ಶಿಶು ಅಭಿವೃದ್ದಿ ಯೋಜನಾಧಿಕಾರಿ ವಿನೋದ್‌ರಾಜು ಡಿ, ಅಧೀಕ್ಷಕ ನಾಗರಾಜ್, ಶಿಕ್ಷಕ ಮುನಿರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ನಾರಾಯಣಗೌಡ ಹೆಚ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.