ಬೈಕ್ ಕಳ್ಳನ ಸೆರೆ ಲಕ್ಷಾಂತರ ರೂ. ಮಾಲು ವಶ

ಬೆಂಗಳೂರು,ಮಾ.೨೯-ಲಾಕ್ ಮುರಿದು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಅನ್ನಪೂರ್ಣೇಶ್ವರಿನಗರ ಪೊಲೀಸರು ೨ಲಕ್ಷ ೫೦ ಸಾವಿರ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಅನ್ನಪೂರ್ಣೇಶ್ವರಿನಗರದ ಡಿ-ಗ್ರೂಪ್ ಲೇಔಟ್ ನ ನವೀನ್ ಕುಮಾರ್ (೧೯) ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಕಳೆದ ಫೆ.೧೪ರಂದು ಮಧ್ಯಾಹ್ನ ತಿಮ್ಮನಪಾಳ್ಯದ ಮನೆಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಿದ ಪ್ರಕರಣವನ್ನು ದಾಖಲಿಸಿಕೊಂಡ ಅನ್ನಪೂರ್ಣೇಶ್ವರಿನಗರ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀನಿವಾಸ್.ವಿ.ಟಿ.ಮತ್ತವರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಆರೋಪಿಯ ಬಂಧನದಿಂದ ಬ್ಯಾಡರಹಳ್ಳಿ, ತಾವರೆಕೆರೆ ಹಾಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ೫ ದ್ವಿಚಕ್ರ ವಾಹನಗಳ ಕಳವು ಪ್ರಕರಣ ಪತ್ತೆಯಾಗಿವೆ ಎಂದರು.