ಬ್ರಿಜ್ ಭೂಷಣ್ ಸಿಂಗ್ ಬಂಧನ ಎಐಕೆಕೆಎಂಎಸ್ ಆಗ್ರಹ


ಸಂಜೆವಾಣಿ ವಾರ್ತೆ
ಕುರುಗೋಡು:ಮೇ.19: ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಕೆಲವು ತರಬೇತುದಾರರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕುರುಕುಳ ನೀಡಿದ್ದಾರೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ್ ಒತ್ತಾಯಿಸಿದರು.
ಭಾರತ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕೈಗೊಳ್ಳುವಂತೆ ಮಹಿಳಾ ಕುಸ್ತಿಪಟುಗಳು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಪಟ್ಟಣದಲ್ಲಿ ಅಖಿಲ ಭಾರತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ಕಾರ್ಯಕರ್ತರು ಗುರುವಾರ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಮಹಿಳಾ ಕುಸ್ತಿಪಟುಗಳು ಮತ್ತು ಬೆಂಬಲಿಗರು ದೆಹಲಿಯಲ್ಲಿ ಹಲವು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಆದರೂ ಯವುದೇ ಕ್ರಮಕ್ಕೆ ಮುಂದಾಗಿಲ್ಲ. ಕೇಂದ್ರದ ಆಡಳಿತಾರೂಢ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪ್ರಭಾವಕ್ಕೆ ಪೊಲೀಸರು ಮಣಿದಿದ್ದಾರೆ ಎಂದು ಆರೋಪಿಸಿದರು.
ಸಂಘಟನೆ ಕಾರ್ಯದರ್ಶಿ ಗುರಳ್ಳಿ ರಾಜ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡಾವೋ ಎಂದು ಹೇಳುತ್ತಿರುವ ಕೇಂದ್ರ ಸರ್ಕಾರ ಮಹಿಳಾ ಕ್ರೀಡಾಪಟುಗಳಿಗೆ ಸೂಕ್ತ ರಕ್ಷಣೆ ನೀಡುವ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಆದರೆ ಖ್ಯಾತನಾಮ ಮಹಿಳಾ ಕುಸ್ತಿಪಟುಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೆ ನೋಡಿಯೂ ನೋಡದಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು. ಮಹಿಳಾ ಕ್ರೀಡಾಪಟುಗಳಿಗೆ ಧೈರ್ಯತುಂಬಿ ಕ್ರೀಡಾ ವಾತಾವರಣ ಸೃಷ್ಟಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಬಸಣ್ಣ, ನಿಂಗಪ್ಪ, ಮಣಿಕಂಠ, ಶ್ರೀನಿವಾಸ, ಬಸವರಾಜ್, ಖಾಸೀಂಸಾಬ್, ಅನೀಲ್, ಮಾಬುಸಾಬ್, ರಾಮಾಂಜಿನಿ, ರಮೇಶ್ ಮತ್ತು ಮುತ್ತಣ್ಣ ಇದ್ದರು.