ಭಕ್ತಾಧಿಗಳ ಮೂಲ ಸೌಕರ್ಯಕ್ಕೆ ಕೊರತೆಯಾಗದಂತೆ ಕ್ರಮವಹಿಸಿ

ಚಿತ್ರದುರ್ಗ.ಫೆ.೨೮;ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದ ಶ್ರೀಗುರು ತಿಪ್ಪೇರುದ್ರ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಮೂಲ ಸೌಕರ್ಯಕ್ಕೆ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಾಯಕನಹಟ್ಟಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಜಾತ್ರೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾರ್ಚ್ 3 ರಿಂದ 13ರ ವರೆಗೆ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಮಾರ್ಚ್ 10 ರಂದು ಜರುಗುವ ದೊಡ್ಡ ರಥೋತ್ಸವಕ್ಕೆ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಜ್ಯದ ವಿವಿಧಡೆಗಳಿಂದ ಸುಮಾರು 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಕುಡಿಯುವ ನೀರು, ಆರೋಗ್ಯ, ನೈರ್ಮಲ್ಯ, ಸಮರ್ಪಕ ವಿದ್ಯುತ್ ವ್ಯವಸ್ಥೆ, ಬಂದೋಬಸ್ತ್, ಸಾರಿಗೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು. ಭಕ್ತಾಧಿಗಳಿಗೆ ಕಿರಿಕಿರಿ ಹಾಗೂ ಕಿರುಕುಳವಾಗಬಾರದು. ಜನರು ಸಂತೋಷದಿಂದ ಜಾತ್ರೆಯಲ್ಲಿ ಭಾಗವಹಿಸುವಂತಾಗಬೇಕು ಎಂದರು.