ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನ : ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ವಿಜಯಪುರ:ಎ.15: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ವಿಶ್ವದ ಗಮನ ಸೆಳೆಯುತ್ತಿದೆ. ಸಂವಿಧಾನದಲ್ಲಿ ಎಲ್ಲ ಆದರ್ಶಗಳನ್ನು ಅಳವಡಿಸುವ ಮೂಲಕ ಜನತೆಗೆ ಸಮಾನತೆಯನ್ನು ಒದಗಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು.

ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.

ಬೆಳಿಗ್ಗೆ 9 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಇಡೀ ದೇಶದಲ್ಲಿಯೇ ಬೃಹತ್ ಲಿಖಿತ ಸಂವಿಧಾನವಾಗಿದೆ. ಸಾಮಾಜಿಕ ಪರಿಕಲ್ಪನೆ ಹೊಂದಿದ ಅವರು ಸಮಾಜದಲ್ಲಿರುವ ಪ್ರತಿಯೊಬ್ಬ ಪ್ರಜೆಯು ಕೂಡ ಗೌರವದಿಂದ, ಸ್ವಾಭಿಮಾನದಿಂದ ಬದುಕಬೇಕು ಎಂಬ ಹಿತದೃಷ್ಟಿಯಿಂದ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ ಎಂದು ಹೇಳಿದರು.

ನಮ್ಮ ದೇಶದಲ್ಲಿ ಹಲವಾರು ರೀತಿಯ ಭಾಷೆ, ಧರ್ಮ ಹೊಂದಿದ್ದು, ದೇಶವನ್ನು ಒಟ್ಟುಗೂಡಿಸುವ ಕಾರ್ಯ ಮಾಡಿದ್ದಾರೆ. ನಮ್ಮ ದೇಶ ವಿಶೇಷವಾಗಿ ನೆರೆಹೊರೆ ರಾಷ್ಟ್ರದೊಂದಿಗೆ ಹೋಲಿಸಿದರೆ ಭಾರತ ದೇಶ ಅತ್ಯಂತ ಬಲಿಷ್ಟವಾಗಿ ನಿರ್ಮಾಣ ಹೊಂದಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿದೆ ಎಂದು ಹೇಳಿದರು.

ಸಮಾಜದಲ್ಲಿ ಎಲ್ಲರೂ ನೆಮ್ಮದಿಯಂದ, ಶಾಂತಿಯುತವಾಗಿ ಬಾಳುವಂತ ಅವಕಾಶವನ್ನು ಕಲ್ಪಿಸಿಕೊಟ್ಟ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ವಿಚಾರಧಾರೆಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಬಿ. ನಾಗರಾಜ್, ಸುಜಾತಾ ಕಳ್ಳಿಮನಿ, ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿಗಳು ಜಯಂತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.