ಕಲಬುರಗಿ.ಮೇ,30: ಭ್ರಷ್ಟ ಬಿಜೆಪಿ ಸರ್ಕಾರದಿಂದ ಬೇಸತ್ತು ಹಾಗೂ ಗ್ಯಾರಂಟಿ ಯೋಜನೆಗಳ ಘೋಷಣೆಗೆ ಬೆಂಬಲಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತಂದಿದ್ದು, ಜನರ ನಿರೀಕ್ಷೆಯಂತೆ ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತದೊಂದಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್ ಖಾತೆಯ ಸಚಿವ ಪ್ರಿಯಾಂಕ್ ಖರ್ಗೆಯವರು ಹೇಳಿದರು.
ಸಚಿವರಾದ ನಂತರ ಮಂಗಳವಾರ ನಗರಕ್ಕೆ ಪ್ರಪ್ರಥಮವಾಗಿ ಆಗಮಿಸಿದ ನಂತರ ಜಿಲ್ಲಾ ಕಾಂಗ್ರೆಸ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇವೆ. ನುಡಿದಂತೆ ನಡೆಯುತ್ತೇವೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಪಕ್ಷವು ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ನಾನು ವೈಯಕ್ತಿಕವಾಗಿ ಭ್ರಷ್ಟಾಚಾರದ ವಿರುದ್ಧ ಕ್ರಮದ ಕುರಿತು ಆರನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೆ. ಅದೂ ಸಹ ಈಗಾಗಲೇ ಜಾರಿಗೆ ಕ್ರಮ ಕೈಗೊಂಡಿದ್ದೇವೆ ಎಂದು ಅವರು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧ್ಧಿ ಮಂಡಳಿಯಲ್ಲಿನ ಅಕ್ರಮ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅಕ್ರಮ, ಭ್ರಷ್ಟಾಚಾರದ ಕುರಿತು ತನಿಖೆ ಕೈಗೊಳ್ಳಲಾಗುತ್ತದೆ. ಈಗಾಗಲೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಕ್ರಮದ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತನಿಖೆಗೆ ಸೂಚನೆ ನೀಡಿದ್ದಾರೆ. ಎರಡು ದಿನಗಳಲ್ಲಿ ತನಿಖೆ ಆರಂಭಗೊಳ್ಳಲಿದೆ ಎಂದು ಅವರು ತಿಳಿಸಿದರು.
ಜನರಿಗೆ ನೀಡಿರುವ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವುದು ನಮ್ಮ ಬದ್ಧತೆಯಾಗಿದೆ. ಭ್ರಷ್ಟಾಚಾರ ರಹಿತ, ಸ್ವಚ್ಛ ಹಾಗೂ ಅಭಿವೃದ್ಧಿಪರ ಆಡಳಿತ ನೀಡುವ ಮೂಲಕ ರಾಜ್ಯದ ಜಿಲ್ಲೆಯ ಜನರು ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನು ಈಡೇರಿಸುತ್ತೇವೆ. ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಅವರು ಹೇಳಿದರು.
ತೊಗರಿಗೆ ಅಂಟಿದ್ದ ನೆಟೆರೋಗದ ಹಿನ್ನೆಲೆಯಲ್ಲಿ ಅಪಾರ ನಷ್ಟವಾಗಿದ್ದು, ಆ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.
ಗಂಗಾ ಕಲ್ಯಾಣ್ ಯೋಜನೆಯಲ್ಲಿನ ಅವ್ಯವಹಾರದ ಕುರಿತು ಈಗಾಗಲೇ ವಿಧಾನಸೌಧ ಪೋಲಿಸ್ ಠಾಣೆಯಲ್ಲಿ ಪರಕರಣ ದಾಖಲಾಗಿದೆ ಎಂದು ಹೇಳಿದ ಅವರು, ಕೆಪಿಟಿಸಿಎಲ್ ಸೇರಿದಂತೆ ಈ ಹಿಂದಿನ ಸರ್ಕಾರದ ನೇಮಕಾತಿಗಳ ಕುರಿತು ಸಮಗ್ರ ತನಿಖೆ ಕೈಗೊಳ್ಳಲಾಗುವುದು. ಬ್ಯಾಕ್‍ಲಾಗ್ ಹುದ್ದೆಗಳ ಭರ್ತಿಗೆ ಇದ್ದ ಅಡೆತಡೆಗಳನ್ನು ನಿವಾರಣೆ ಮಾಡಲಾಗಿದ್ದು, ನಿಯಮಾನುಸಾರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾಗಿದ್ದ ಅನುದಾನ ನೀಡದೇ ಇರುವುದರಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಆದಾಗ್ಯೂ, ನಮ್ಮ ಸರ್ಕಾರ ಸರಳೀಕರಣ ಹಾಗೂ ಸಬಲೀಕರಣದ ಮೂಲಕ ಯೋಜನೆಗಳನ್ನು ರೂಪಿಸಿ ಕಂದಾಯ ಸಂಗ್ರಹಣೆ ಮಾಡಿ ರಾಜ್ಯಕ್ಕೆ ಉತ್ತಮ ಆಡಳಿತ ನೀಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ನಗರ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ನೀರಿನ ಸಮಸ್ಯೆಯ ಕುರಿತು ವಿವರವಾದ ಚರ್ಚೆ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ಹೇಳಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷೇಧದ ಕುರಿತು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಕಟುವಾಗಿ ಟೀಕಿಸಿದ್ದರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆಯವರು, ಕೆ.ಎಸ್. ಈಶ್ವರಪ್ಪ ಅವರು ಈಗಾಗಲೇ ಸ್ವಯಂ ರಾಜಕೀಯ ನಿವೃತ್ತಿ ತೆಗೆದುಕೊಂಡಿದ್ದಾರೆ. ಹಾಗಾಗಿ ಅವರ ಕುರಿತು ಮಾತನಾಡುವ ಅಗತ್ಯವಿಲ್ಲ ಎಂದು ಲೇವಡಿ ಮಾಡಿದರು.
ಸಚಿವರಾಗಿ ಪ್ರಿಯಾಂಕ್ ಖರ್ಗೆ ಮತ್ತು ಡಾ. ಶರಣಪ್ರಕಾಶ್ ಪಾಟೀಲ್ ಅವರು ಪ್ರಥಮ ಬಾರಿಗೆ ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಇಬ್ಬರೂ ಸಚಿವರಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾರ್ದಿಕ ಸ್ವಾಗತ ಕೋರಿದರು. ಅಲ್ಲದೇ ವಿಮಾನ ನಿಲ್ದಾಣದಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯವರೆಗೆ ತೆರೆದ ವಾಹನದಲ್ಲಿ ಇಬ್ಬರೂ ಸಚಿವರನ್ನು ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ನಂತರ ಪಕ್ಷದ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಭಯ ಸಚಿವರಿಗೆ ಅಭಿನಂದಿಸಿದರು.