
ಕೊರಟಗೆರೆ, ಮಾ. ೫- ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಶತಾಯ-ಗತಾಯ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂಬ ಸಂಕಲ್ಪ ಮಾಡಿರುವ ಕಾಂಗ್ರೆಸ್ ಪಕ್ಷ ಇಂದು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ವಿರುದ್ಧ ರಣಕಹಳೆ ಮೊಳಗಿಸಿತು.
ರಾಜ್ಯದಲ್ಲಿ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ಬಿಜೆಪಿಯನ್ನು ಕಿತ್ತೊಗೆದು, ವಚನ ಭ್ರಷ್ಟ ಜೆಡಿಎಸ್ ಪಕ್ಷವನ್ನು ಬದಿಗೆ ಸರಿಸಿ ಬಡವರ, ದೀನ ದಲಿತರ ಹಾಗೂ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಸದಾ ತುಡಿಯುತ್ತಿರುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂಬ ಪರಿಪರಿ ಮನವಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ ಕಾಂಗ್ರೆಸ್ ನಾಯಕರು ಸಮಾವೇಶದಲ್ಲಿ ಮನವಿ ಮಾಡಿದರು.
ಕೊರಟಗೆರೆಯಲ್ಲಿ ನೂತನವಾಗಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಿರ್ಮಿಸಲಾಗಿರುವ ರಾಜೀವ ಭವನವನ್ನು ಉದ್ಧಾಟಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದ ಪಕ್ಕದಲ್ಲಿ ಸಿದ್ದಗೊಳಿಸಿದ ಬೃಹತ್ ವೇದಿಕೆಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಬಿ.ಕೆ. ಹರಿಪ್ರಸಾದ್ ಅವರು ಕೈ ಬೀಸುತ್ತಿದ್ದಂತೆ ವೇದಿಕೆ ಮುಂಭಾಗ ನೆರೆದಿದ್ದ ಕಾರ್ಯಕರ್ತರು, ಅಭಿಮಾನಿಗಳ ಜಯಘೋಷ, ಜೈಕಾರಗಳು ಮುಗಿಲು ಮುಟ್ಟಿದವು.
ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸರ್ವಾಧಿಕಾರಿಗಳಂತೆ ವರ್ತಿಸುತ್ತಿದೆ. ಇಂತಹ ಭ್ರಷ್ಟ, ಬಡವರ ವಿರೋಧಿ, ಅಲ್ಪಸಂಖ್ಯಾತರ ವಿರೋಧಿ ಸರ್ಕಾರಗಳನ್ನು ಈ ಬಾರಿಯ ಚುನಾವಣೆಯಲ್ಲಿ ಕಿತ್ತೊಗೆದು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದರು.
ದೇಶ ಮತ್ತು ರಾಜ್ಯದಲ್ಲಿ ಬದಲಾವಣೆಯ ಪರ್ವ ಕರ್ನಾಟಕದಿಂದಲೇ ಆರಂಭವಾಗಬೇಕು. ಹಲವು ಹೊಸತುಗಳಿಗೆ ಕರ್ನಾಟಕ ಸಾಕ್ಷಿಯಾಗಿದೆ. ಅದೇ ರೀತಿ ಈ ಬಾರಿಯ ಚುನಾವಣೆಯಲ್ಲೂ ಕರ್ನಾಟಕ ಮತ್ತೊಮ್ಮೆ ಬದಲಾವಣೆಯ ಪರ್ವಕ್ಕೆ ಸಾಕ್ಷಿಯಾಗಲಿದೆ ಎಂಬ ನಂಬಿಕೆ, ವಿಶ್ವಾಸ ತಮಗಿದೆ ಎಂದರು.
ಕಳೆದ ೯ ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಶೂನ್ಯ. ಪ್ರಧಾನಿ ಮೋದಿಯವರು ನೀಡಿದ್ದ ಯಾವುದೇ ಭರವಸೆಗಳು ಈಡೇರಿಲ್ಲ. ಬದಲಾಗಿ ಉದ್ಯೋಗಗಳು ಕಡಿತಗೊಂಡು ಲಕ್ಷಾಂತರ ಮಂದಿ ಬೀದಿ ಬಿದ್ದರು. ಇದೇನಾ ಅಚ್ಛೆ ದಿನ್ ಎಂದು ಪ್ರಶ್ನಿಸಿದರು.
ಇನ್ನು ರಾಜ್ಯ ಬಿಜೆಪಿ ಸರ್ಕಾರ ೪೦ ಪರ್ಸೆಂಟೆಜ್‌ಗೆ ಹೆಸರುವಾಸಿ. ಸರ್ಕಾರದ ಸಚಿವರು, ಶಾಸಕರ ಕಮೀಷನ್ ದಂಧೆಯಿಂದಾಗಿ ಗುತ್ತಿಗೆದಾರರು ಬೀದಿ ಪಾಲಾಗುತ್ತಿದ್ದಾರೆ. ಈಗಾಗಲೇ ಹಲವು ಮಂದಿ ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ಭ್ರಷ್ಟ ಸರ್ಕಾರ ಬೇಕಾ ಎಂದ ಅವರು, ಈ ಬಾರಿ ಬಿಜೆಪಿ ಸರ್ಕಾರವನ್ನು ತೊಲಗಿಸಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ ಎಂದು ಕರೆ ನೀಡಿದರು.
ಕೊರಟಗೆರೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಅವರನ್ನು ಮತ್ತೊಮ್ಮೆ ಆಶೀರ್ವದಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕ್ಷೇತ್ರದ ಜನತೆ ಕಾರಣೀಭೂತರಾಗಬೇಕು ಎಂದು ಅವರು ಮನವಿ ಮಾಡಿದರು.
ಸಮಾರಂಭದಲ್ಲಿ ಮಾಜಿ ಸಚಿವ ಟಿ.ಬಿ. ಜಯಚಂದ್ರ, ಮಾಜಿ ಶಾಸಕ ಕೆ.ಎನ್. ರಾಜಣ್ಣ, ಕೆ. ಷಡಕ್ಷರಿ, ಡಾ. ರಫೀಕ್‌ಅಹಮದ್, ಸಾಸಲು ಸತೀಶ್, ಮುರುಳೀಧರ ಹಾಲಪ್ಪ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರುಗಳು ಭಾಗವಹಿಸಿದ್ದರು.
ಖರ್ಗೆ ರೋಡ್ ಶೋ
ಕೊರಟಗೆರೆಯಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಅಖಿಲ ಭಾರತೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭರ್ಜರಿ ರೋಡ್ ಶೋ ನಡೆಸಿದರು.
ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಜಾಧ್ವನಿ ಬಸ್‌ನಲ್ಲಿ ಕಾರ್ಯಕ್ರಮದ ನಡೆಯುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಕ್ಕದ ಮೈದಾನದಲ್ಲಿ ಕರೆದೊಯ್ಯಲಾಯಿತು.
ತೆರೆದ ಪ್ರಜಾಧ್ವನಿ ಬಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರತ್ತೆ ಕೈ ಬಿಸುತ್ತಾ ರೋಡ್ ಶೋ ನಡೆಸುವ ಮೂಲಕ ಮತದಾರರನ್ನು ಕಾಂಗ್ರೆಸ್‌ನತ್ತ ಸೆಳೆಯುವ ಪ್ರಯತ್ನ ನಡೆಸಿದರು.
ರೋಡ್ ಶೋ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿ ಜೈಕಾರದ ಘೋಷಣೆಗಳನ್ನು ಮೊಳಗಿಸಿದರು.
ರೋಡ್ ಶೋ ನಡೆಸಿದ ಕಾಂಗ್ರೆಸ್ ನಾಯಕರಿಗೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪುಷ್ಪವೃಷ್ಠಿ ಸುರಿಸಿ ಬೃಹತ್ ಹಾರ ಹಾಕುವ ಮೂಲಕ ತಮ್ಮ ಅಭಿಮಾನವನ್ನು ಮೆರೆದರು.
ಕೊರಟಗೆರೆ ಬಸ್ ನಿಲ್ದಾಣದಿಂದ ಕಾರ್ಯಕ್ರಮದ ವೇದಿಕೆ ವರೆಗೂ ರೋಡ್ ಶೋ ನಡೆಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣೆಗೆ ಮತ ಬೇಟೆ ನಡೆಸಿದರು.