ಮಂಕಿಪಾಕ್ಸ್ ರಾಜ್ಯದಲ್ಲಿ ಕಟ್ಟೆಚ್ಚರ:ಸೋಂಕಿತರಿಗೆ 2 ಆಸ್ಪತ್ರೆ ಮೀಸಲು: ಡಾ.ಸುಧಾಕರ್

ಬೆಂಗಳೂರು,ಆ.2- ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಂದರು ಮತ್ತು ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಕೆ ಸುಧಾಕರ್ ಇಂದಿಲ್ಲಿ ತಿಳಿಸಿದ್ದಾರೆ.ಮಂಕಿಪಾಕ್ಸ್ ರೋಗ ಕಂಡುಬಂದರೆ ಅವರಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ಸಾಂಕ್ರಾಮಿಕ ರೋಗ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯನ್ನು ಇದಕ್ಕಾಗಿ ಮೀಸಲಿರಿಸಲಾಗಿದೆ ಎಂದು ಹೇಳಿದರು.ರಾಜ್ಯದಲ್ಲಿ ಮಂಕಿಪಾಕ್ಸ್ ರೋಗ ತಡೆಯುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಕಿಪಾಕ್ಸ್ ಸೋಂಕಿನ ಬಗ್ಗೆ ರಾಜ್ಯದ ಜನರು ಆತಂಕ ಪಡುವುದು ಬೇಡ. ಮುನ್ನೆಚ್ಚರಿಕೆ ಮತ್ತು ಶುಚಿತ್ವ ಕಾಪಾಡುವುದು ಅಗತ್ಯ ಎಂದು ಅವರು ತಿಳಿಸಿದ್ದಾರೆ.

ಮೂರು ಶಂಕಿತ ಪ್ರಕರಣ ಪತ್ತೆ:

ಕೋವಿಡ್ ಸೋಂಕಿನ ಮಾದರಿಯಲ್ಲಿ ಹರಡುವ ಸಾಂಕ್ರಾಮಿಕ ರೋಗವಲ್ಲ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ರಾಜ್ಯದಲ್ಲಿ ಇದುವರೆಗೂ 3 ಶಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಎರಡು ವರದಿಗಳು ನೆಗೆಟಿವ್ ಆಗಿದೆ. ಇನ್ನೊಂದರ ವರದಿ ಬರಬೇಕಾಗಿದೆ ಎಂದರು.ಜಗತ್ತಿನ 80ಕ್ಕೂ ಅಧಿಕ ದೇಶಗಳಲ್ಲಿ 20 ಸಾವಿರ ಮಂದಿಯಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆ ಕಳೆದ ತಿಂಗಳು ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ:

ದೇಶದಲ್ಲಿ ಪತ್ತೆಯಾಗಿರುವ ಸೋಂಕಿನ ಪೈಕಿ ಕೇರಳದಲ್ಲಿ 4 ಮಂದಿಗೆ ಮಂಕಿಪಾಕ್ಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ವಿಮಾನ ನಿಲ್ದಾಣಗಳಲ್ಲಿ ಥರ್ಮಲ್ ಸ್ಕೀನಿಂಗ್ ತೆರೆಯಲಾಗಿದ್ದು, ಅನುಮಾನ ಬಂದವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದರು.ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.