
ಮಂಡ್ಯ,ಆ.೩೧-ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಮಂಡ್ಯದಲ್ಲಿ ರೈತ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ಮಳೆ ಕೈಕೊಟ್ಟಿದೆ. ಇಂತಹ ಸಂಕಷ್ಟ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ರೈತರ ಹಿತ ಕಡೆಗಣಿಸಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ನಗರದ ಸರ್.ಎಂ. ವಿಶ್ವೇಶರಯ್ಯ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪಾಲ್ಗೊಂಡು ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ಬೆಳೆಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದಾರೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಸರ್ಕಾರ ನೀರು ಬಿಟ್ಟಿದೆ. ಸಂಕಷ್ಟ ಪರಿಸ್ಥಿತಿ ಎದುರಾದಾಗಲೆಲ್ಲಾ ಕಾವೇರಿ ನಿರ್ವಹಣಾ ಸಮಿತಿ ಹಾಗೂ ಕಾವೇರಿ ನದಿ ನೀರು ಪ್ರಾಧಿಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಾ ಬಂದಿದೆ ಎಂದು ಪ್ರತಿಭಟನಾಕಾರರು ದೂರಿದರು.
ರಾಜ್ಯದಲ್ಲಿ ಮಳೆ ಕೈ ಕೊಟ್ಟಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ನಡೆಯನ್ನು ವಿರೋಧಿಸಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸಲು ವಿವಿಧ ಸಂಘಟನೆಗಳು ಕರೆ ಕೊಟ್ಟಿವೆ. ನಿನ್ನೆಯೂ ಕಡೆ ಜಿಲ್ಲೆಯ ಹಲವು ಭಾಗಗಳಲ್ಲಿ ವಿವಿಧ ಕನ್ನಡ ಪರ ಹಾಗೂ ರೈತ ಸಂಘಟನೆಗಳು ಪಂಜಿನ ಮೆರವಣಿಗೆ ನಡೆಸಿದವು. ನಾಳೆಯೊಳಗೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕರು ಎಚ್ಚರಿಕೆ ನೀಡಿದ್ದಾರೆ. ಇಂದು ಕೂಡ ಜಿಲ್ಲೆಯ ಹಲವು ಭಾಗಗಳಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ೧೫ ದಿನಗಳ ಕಾಲ ಪ್ರತಿನಿತ್ಯ ೫೦೦೦ ಸಾವಿಕ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಸೂಚಿಸಿತ್ತು. ಇದರ ಬೆನ್ನೆಲ್ಲೇ ಕಾವೇರಿ ನೀರಾವರಿ ನಿಗಮ ಈಗಾಗಲೇ ತಮಿಳುನಾಡಿಗೆ ನೀರು ಹರಿಸುತ್ತಿದೆ. ನಿನ್ನೆಯೂ ೭೨೭೯ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಆದರೆ ಈ ಬಗ್ಗೆ ಮಾಹಿತಿ ನೀಡಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಿರಾಕರಿಸಿದ್ದಾರೆ.