ಮಂಡ್ಯ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ 50 ಕೋಟಿ: ಸರ್ಕಾರಕ್ಕೆ ಅಭಿನಂಧನೆ

ಬೆಂಗಳೂರು,ಜೂ.14-ರಾಜ್ಯದಲ್ಲಿನ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆಯಾದ  ಮಂಡ್ಯ ಜಿಲ್ಲೆಯ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನ ಹಾಗೂ ದುಡಿಯುವ ಬಂಡವಾಳಕ್ಕಾಗಿ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರಕ್ಕೆ  ಸರ್ಕಾರಕ್ಕೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅಭಿನಂಧನೆ ಸಲ್ಲಿಸಿದ್ದಾರೆ.

ಹಣ ಬಿಡುಗಡೆಗೆ  ಹಣಕಾಸು ಇಲಾಖೆಯಿಂದ  ಅನುಮತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ,ಉಪ ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್‌ ಹಾಗು, ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

2023-24 ನೇ ಸಾಲಿನಲ್ಲಿ ಕಬ್ಬು ನುರಿಸಲು ಸರ್ಕಾರದಿಂದ ತುರ್ತಾಗಿ ಧನ ಸಹಾಯ ನೀಡಬೇಕೆಂದು ತಾವು ಮಾಡಿದ್ದ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ತಕ್ಷಣವೇ ಹಣ ಬಿಡುಗಡೆಗೆ ವ್ಯವಸ್ಥೆ ಮಾಡಿದ್ದಾರೆ. ಇದು ಈ ಭಾಗದ ರೈತರಿಗೆ ವರದಾನವಾಗಿದೆ. ರೈತರ ಹಿತದೃಷ್ಟಿಯಿಂದ ಕೂಡಲೇ ಹಣ ಮಂಜೂರು ಮಾಡಿರುವುದಕ್ಕೆ ರೈತರ ಪರವಾಗಿ ಹಾಗೂ ಮಂಡ್ಯ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ  ಹೇಳಿದ್ದಾರೆ.

ಕಬ್ಬು ಕಟಾವು ಪ್ರಾರಂಭವಾಗುವ ಮೊದಲು ಗ್ಯಾಂಗ್‌ಗಳಿಗೆ ನೀಡಲು ಹಣದ ಅವಶ್ಯಕತೆ ಇದೆ. ಯಂತ್ರಗಳ ದುರಸ್ತಿಗಳೂ ಇವೆ. ಅದಕ್ಕಾಗಿ ತಕ್ಷಣ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಹೀಗಾಗಿ ಕಾರ್ಖಾನೆ ಪ್ರಾರಂಭೋತ್ಸವ ಹಾಗೂ ಗ್ಯಾಂಗ್‌ಗಳಿಗೆ ನೀಡಲು 15 ಕೋಟಿ ರೂ. ಹಾಗೂ ಕಾರ್ಖಾನೆಯ ದುಡಿಯುವ ಬಂಡವಾಳ ಗಾಗಿ 35 ಕೋಟಿ ರೂ. ನೀಡಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿತ್ತು. ಈಗ ರಾಜ್ಯ ಸರ್ಕಾರ ಅನುದಾನವನ್ನೂ ಬಿಡುಗಡೆ ಮಾಡಿದೆ ಎಂದಿದ್ದಾರೆ.

ಸರ್ಕಾರದ ಈ ಸಹಾಯದಿಂದ ಅವಧಿಗೆ ಸರಿಯಾಗಿ ಕಾರ್ಖಾನೆಯಲ್ಲಿ ಕಬ್ಬು ನುರಿಸುವಿಕೆ ಪ್ರಾರಂಭಿಸಲು ಅನುಕೂಲವಾಗಲಿದೆ. ರೈತರಿಗೆ ಸಕಾಲದಲ್ಲಿ ಕಬ್ಬು ಕಟಾವು ಹಾಗೂ ಹಣ ಬಿಡುಗಡೆಗೂ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.