ಮಂತ್ರಿ ಸ್ಥಾನಕ್ಕೆ ಒತ್ತಡ ಹಾಕಿಲ್ಲ

ನವದೆಹಲಿ,ಜೂ.೭: ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಸ್ಥಾನಕ್ಕೆ ತಾವು ಒತ್ತಡ ಹಾಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಸಂಸದ ಎಚ್.ಡಿ ಕುಮಾರಸ್ವಾಮಿ ಹೇಳಿದರು.
ದೆಹಲಿಯಲ್ಲಿಂದು ನಡೆದಿರುವ ಎನ್‌ಡಿಎ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ನಾನು ಒತ್ತಡ ಹಾಕುತ್ತಿಲ್ಲ. ಮೋದಿ ಅವರು ಜವಾಬ್ದಾರಿ ನೀಡಿದರೆ ಕಾರ್ಯ ನಿರ್ವಹಿಸುತ್ತೇನೆ ಅಷ್ಟೆ. ತೀರ್ಮಾನವೇನಿದ್ದರೂ ಮೋದಿ ಅವರದ್ದು ಎಂದರು.
ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಳ್ವಿಕೆ ನಡೆಸಲಿದೆ. ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಅಧಿಕೃತವಾಗಿ ನನಗೆ ಯಾವುದೇ ಮಾಹಿತಿ ಬಂದಿಲ್ಲ. ನಮ್ಮಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯ ಎನ್ನುವುದು ಬಿಜೆಪಿ ಹೈಕಮಾಂಡ್‌ಗೆ ಗೊತ್ತಿದೆ. ಅವರು ತೀರ್ಮಾನ ಮಾಡಿ ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂದರು.
ಬೆಂಗಳೂರು ಗ್ರಾಮಾಂತರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಡಾ. ಸಿ.ಎನ್ ಮಂಜುನಾಥ್ ಅವರಿಗೆ ಮಂತ್ರಿ ಸ್ಥಾನ ನೀಡುವ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಲ್ಲವನ್ನೂ ಬಿಜೆಪಿ ಹೈಕಮಾಂಡ್‌ನ ನಿರ್ಧಾರಕ್ಕೆ ಬಿಟ್ಟಿದ್ದೇವೆ ಎಂದರು.