ಮಕ್ಕಳಿಗಾಗಿಯೇ 50 ವೆಂಟಿಲೇಟರ್‍ಗಳ ವ್ಯವಸ್ಥೆ: ಆನಂದಸಿಂಗ್

ಬಳ್ಳಾರಿ,ಮೇ29: ಕೋವಿಡ್ ನ 3ನೇ ಅಲೆ ಎದುರಿಸುವ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳುತ್ತಿದ್ದು, ತಜ್ಞರ ವರದಿ ಆಧರಿಸಿ ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮಕ್ಕಳಿಗಾಗಿಯೇ 50 ವೆಂಟಿಲೇರ್‍ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಅದೇ ರೀತಿ ತಾಲೂಕು ಕೇಂದ್ರಗಳಲ್ಲಿ 5ರಿಂದ 10 ವೆಂಟಿಲೇಟರ್‍ಗಳ ಸಿದ್ಧತೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು
500ರಿಂದ 1 ಸಾವಿರ ಆಕ್ಸಿಜನ್ ಮಾಸ್ಕ್ ಗಳನ್ನು ಖರೀದಿಸಲು ನಿರ್ಧರಿಸಲಾಗಿದ್ದು,10ದಿನದೊಳಗೆ ಟೆಂಡರ್ ಕರೆಯಲಾಗುವುದು.
ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಪ್ರಮಾಣ ಇಳಿಕೆಯಾಗುತ್ತಿರುವುದು ಸಂತೋಷದ ವಿಷಯ.ಹೊಸದಾಗಿ 25 ವೆಂಟಿಲೇಟರ್‍ಗಳು ಬಂದಿದ್ದು,ಅವುಗಳಲ್ಲಿ 10 ಜಿಲ್ಲಾಸ್ಪತ್ರೆ,10 ವಿಮ್ಸ್ ಹಾಗೂ 05 ಜಿಂದಾಲ್ ಆಸ್ಪತ್ರೆಯಲ್ಲಿ ಅಳವಡಿಸಲು ಕ್ರಮವಹಿಸಲಾಗಿದೆ. ಜಿಲ್ಲೆಯಲ್ಲಿ ವೆಂಟಿಲೇಟರ್ ಬೆಡ್‍ಗಳ ಕೊರತೆ ಇದೆ ಎನ್ನುವ ಆತಂಕವೂ ಬೇಡ ಎಂದರು.

ಜಿಂದಾಲ್ ಬಳಿಯ ಕೋವಿಡ್ ಕೇರ್ ಫೀಲ್ಡ್ ಆಸ್ಪತ್ರೆಯಲ್ಲಿ 126 ಜನರು ಚಿಕಿತ್ಸೆ ಪಡೆಯುತ್ತಿದ್ದು,ಅವರ ಆರೋಗ್ಯ ಯೋಗಕ್ಷೇಮ ವಿಚಾರಿಸಿಕೊಂಡು ಬಂದಿದ್ದು,ಎಲ್ಲರೂ ಗುಣಮುಖರಾಗುತ್ತಿದ್ದಾರೆ.
ಸಾರ್ವಜನಿಕರ ಹಿತದೃಷ್ಠಿಯಿಂದ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈಗಾಗಲೇ ವಿಧಿಸಲಾಗಿರುವ ಸಂಪೂರ್ಣ ಲಾಕ್‍ಡೌನ್ ಆದೇಶವನ್ನು ಜೂ.7ರವರೆಗೆ ವಿಸ್ತರಿಸಲಾಗಿದೆ. ಮೇ 31 ಮತ್ತು ಜೂ.1 ರಂದು ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಜಿಂದಾಲ್‍ಗೆ ಭೂಮಿ ಮಾರಾಟಕ್ಕೆ ಸಂಬಂಧಿಸಿದಂತೆ ಸರಕಾರ ಕೈಗೊಂಡಿರುವ ನಿರ್ಧಾರಕ್ಕೆ ಸಮ್ಮತಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್,ಡಿಎಚ್‍ಒ ಡಾ.ಜನಾರ್ಧನ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ,ವಿಮ್ಸ್ ನಿರ್ದೇಶಕ ಗಂಗಾಧರಗೌಡ ಮತ್ತಿತರರು ಇದ್ದರು.