ಮಕ್ಕಳ ಗ್ರಾಮಸಭೆ ಕಡ್ಡಾಯ ಆಯೋಜಿಸಿ


ಗದಗ, ಡಿ 1: ಪ್ರತಿ ಗ್ರಾಮ ಪಂಚಾಯತ್‍ಗಳಲ್ಲಿ ಮಕ್ಕಳ ಗ್ರಾಮಸಭೆಯನ್ನು ಕಡ್ಡಾಯವಾಗಿ ಆಯೋಜಿಸುವ ಮೂಲಕ ಮಕ್ಕಳ ಸಮಸ್ಯೆಗಳನ್ನು ಹೇಳಿಕೊಳ್ಳಲು ವೇದಿಕೆ ಒದಗಿಸುವುದು. ಬಾಲ್ಯವಿವಾಹ, ಬಾಲಕಾರ್ಮಿಕತೆ, ಭಿಕ್ಷಾಟನೆ, ಶಾಲೆಯಿಂದ ಹೊರಗುಳಿದ ಮಕ್ಕಳು, ಮಕ್ಕಳ ಮೇಲಿನ ದೌರ್ಜನ್ಯ ಮುಕ್ತ ಗ್ರಾಮ ಪಂಚಾಯತ್‍ಗಳನ್ನಾಗಿ ಮಾಡಲು ಶ್ರಮಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್. ರವರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಹೇಳಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪೊಲೀಸ್, ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಕೊಪ್ಪಳ ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಿಗೆ ಹಾಗೂ ಅಂಗವಾಡಿ ಮೇಲ್ವಿಚಾರಕಿಯರಿಗೆ ಮಕ್ಕಳ ಗ್ರಾಮಸಭೆ ಅನುಷ್ಠಾನ ಮತ್ತು ಮಕ್ಕಳ ಹಕ್ಕುಗಳ ಸಂರಕ್ಷಣೆಯಲ್ಲಿ ಗ್ರಾಮ ಪಂಚಾಯತ್ ಪಾತ್ರದ ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಮಂಜುನಾಥ ಬಮ್ಮನಕಟ್ಟಿ ಮಾತನಾಡುತ್ತಾ, ಸರಕಾರದ ನಿಯಮಗಳನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಮಕ್ಕಳ ಗ್ರಾಮ ಸಭೆಯನ್ನು ಕಡ್ಡಾಯವಾಗಿ ನಡೆಸುವ ಜೊತೆಗೆ ಮಕ್ಕಳ ಹಕ್ಕುಗಳ ಸಂರಕ್ಷಣೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಮ್ಮ ಪಾತ್ರ ಅಮೂಲ್ಯವಾದದ್ದು ಎಂದು ಹೇಳಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು ಹಾಗೂ ಅಂಗವಾಡಿ ಮೇಲ್ವಿಚಾರಕಿಯರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ 1098 ಸಿಬ್ಬಂದಿಗಳು ಹಾಜರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ- ಯುನಿಸೆಫ್ ಸಂಯೋಜಕರಾದ ರಾಘವೇಂದ್ರ ಭಟ್ ಉಪನ್ಯಾಸ ಮಾಡಿದರು.
ಪ್ರಭಾರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಹೆಚ್.ಎಸ್.ಜೋಗೇರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಉಸ್ಮಾನ್ ಎ. ವಂದಿಸಿದರು.