ಮಕ್ಕಳ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ


ಹಾವೇರಿ,ಜೂ.18: : ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜೊತೆಗೆ ಮಕ್ಕಳ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ಮಾಡುವಲ್ಲಿ ಶಿಕ್ಷಕರ ಹಾಗೂ ಪಾಲಕರ ಪಾತ್ರ ಮುಖವಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರು ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಸಯೋಗದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಹಾಗೂ ವಸತಿ ಶಾಲೆ ಮತ್ತು ವಸತಿ ನಿಲಯಗಳ ವಾರ್ಡನಗಳಿಗೆ ಆಯೋಜಿಸಲಾದ ಮಾನಸಿಕ ಆರೋಗ್ಯ ಅರಿವು, ವಿವಿಧ ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಾಲೆಗಳಲ್ಲಿ ಎಲ್ಲ ಮಕ್ಕಳಿಗೂ ಕಲಿಕೆ ಜೊತೆಗೆ ಆರೋಗ್ಯ ಶಿಕ್ಷಣ ನೀಡುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಹಾಗೂ ವಸತಿ ನಿಲಯಗಳ ವಾರ್ಡನಗಳಿಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಈ ಕಾರ್ಯಾಗಾರದಲ್ಲಿ ನೀಡಲಾದ ಮಾಹಿತಿಗಳನ್ನು ನಿಮ್ಮ ಶಾಲೆಯ ಎಲ್ಲ ಶಿಕ್ಷಕರಿಗೆ ನೀಡಿ. ಮಕ್ಕಳೊಂದಿಗೆ ಸಂವಾದ ನಡೆಸಿ ಮಕ್ಕಳಿಗೆ ವಿಷಯಗಳನ್ನು ಮನವರಿಕೆ ಮಾಡಿದರೆ, ಆ ಮಕ್ಕಳು ಮನೆಯಲ್ಲಿ ಆ ವಿಷಯಗಳ ಕುರಿತು ಪಾಲಕರಿಗೆ ಮಾಹಿತಿ ನೀಡುತ್ತಾರೆ. ಇದರಿಂದ ಒಂದು ಗ್ರಾಮದಲ್ಲಿ 50 ಮನೆಗಳಿಗಾದರೂ ಜಾಗೃತಿ ಮೂಡಿಸಿದಂತಾಗುತ್ತದೆ. ತಾಲೂಕಾ ಮಟ್ಟದಲ್ಲಿ ಕಾರ್ಯಾಗಾರ ಮಾಡಿ ಮುಂದಿನ ದಿನಗಳಲ್ಲಿ ವರದಿ ನೀಡಿ ಎಂದು ಹೇಳಿದರು.
ಮಕ್ಕಳ ಹಿತೃಷ್ಟಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಅವರು ಈ ಕಾರ್ಯಾಗಾರ ಆಯೋಜಿಸಿದ್ದು, ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ಕಾರ್ಯಾಗಾರ ಉದದ್ಘಾಟಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಅವರು ಮಾತನಾಡಿ, ಶಾಲಾ-ಕಾಲೇಜುಗಳ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬಂದರೆ ಸಂಬಂಧಸಿದ ಅಧಿಕಾರಿಗಳ ಗಮನಕ್ಕೆ ತರಬೇಕು. ವಾರದೊಳಗಾಗಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಕ್ರಮವಹಿಸಲಾಗುವುದು ಎಂದರು.
ಶಾಲೆಗಳಲ್ಲಿ ಆರೋಗ್ಯ ಶಿಕ್ಷಣ, ಮಕ್ಕಳ ಹುಕ್ಕುಗಳ ಬಗ್ಗೆ, ಟ್ರಾನ್ಸ್ ಜೆಂಡರ್ ಬಗ್ಗೆ ಅರಿವು ಮೂಡಿಸಬೇಕು. ಎಲ್ಲ ಮಕ್ಕಳ ಬುದ್ಧಿಶಕ್ತಿ ಒಂದೇ ತರನಾಗಿರುವುದಿಲ್ಲ, ಒಂದೊಂದು ಮಕ್ಕಳ ಆಸಕ್ತಿ, ವಿಭಿನ್ನವಾಗಿರುತ್ತದೆ ಅದನ್ನು ಅರಿತುಕೊಳ್ಳಬೇಕು. ಎಲ್ಲ ಮಕ್ಕಳಿಗೂ ಸಮಾನ ಅವಕಾಶ ನೀಡಬೇಕು. ಮಕ್ಕಳನ್ನೂ ಉತ್ತಮ ಪ್ರಜೆಗಳನ್ನಾಗಿ ಮಾಡಲು ನೂರಕ್ಕೆ ನೂರಷ್ಟು ಶ್ರಮಹಾಕಬೇಕು ಎಂದು ಸಲಹೆ ನೀಡಿದರು. ಮನೋವೈದ್ಯ ಡಾ.ವಿಜಯಕುಮಾರ ಬಳಿಗಾರ ಅವರು ಮಾನಸಿಕ ಖಾಯಿಲೆಗಳ ಲಕ್ಷಣ, ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸರಿತಾ ಅವರು ಸಾಂಕ್ರಾಮಿಗಳ ಹರಡುವಿಕೆ ಹಾಗೂ ನಿಯಂತ್ರಣ ಕ್ರಮಗಳ ಕ್ರಮಗಳ ಬಗ್ಗೆ ತಿಳಿಸಿದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನೀಲೇಶ ಎಂ.ಎನ್. ಅವರು ಟಿ.ಬಿ.ರೋಗದ ಲಕ್ಷಣ ಹಾಗೂ ಚಿಕಿತ್ಸೆ ಬಗ್ಗೆ ವಿವರವಾದ ಮಾಹಿತಿ ನೀಡಿದರು.