ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ: ನಾಗೇಶ್

ಮಡಿಕೇರಿ, ಜು.24- ಮರಳು ಮೂಟೆ ಅಳವಡಿಸಿದ ನಂತರ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನ ಬಳಿ ಮಂಗಳೂರು ರಸ್ತೆ ತಡೆಗೋಡೆ ವೀಕ್ಷಿಸಿದರು. ಮದೆನಾಡು ಸಮೀಪ ಗುಡ್ಡ ಕುಸಿದಿರುವ ಪ್ರದೇಶಕ್ಕೂ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.
ತಡೆಗೋಡೆಯನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಜೊತೆಗೆ ಜಿಲ್ಲಾಧಿಕಾರಿ ಅವರ ಕಚೇರಿಗೆ ತೆರಳಲು ರಸ್ತೆ ಮಾಡಿದ್ದರ ಪರಿಣಾಮವಾಗಿ ಇಂತಹ ದುಸ್ಥಿತಿ ಎದುರಿಸುವಂತಾಗಿದೆ ಎಂದು ಸ್ಥಳೀಯರೊಬ್ಬರು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಗಮನಹರಿಸಲಾಗುವುದು. ಸದ್ಯ ಮರಳು ಮೂಟೆ ಅಳವಡಿಸುವ ಕಾರ್ಯ ನಡೆಯುತ್ತಿದ್ದು, ಈ ಬಗ್ಗೆ ಚರ್ಚಿಸಿ ಕ್ರಮವಹಿಸ ಲಾಗುವುದು ಎಂದು ಭರವಸೆ ನೀಡಿದರು.
ಮಡಿಕೇರಿ-ಮಂಗಳೂರು ರಸ್ತೆ ಜಿಲ್ಲಾಡಳಿತ ಭವನ ಬಳಿ ತಡೆಗೋಡೆಯ ಸ್ಲ್ಯಾಬ್‍ಗಳು ಹೊರಚಾಚಿದ ಹಿನ್ನೆಲೆ, ತಾತ್ಕಾಲಿಕವಾಗಿ ಸಾರಿಗೆ ಸಂಚಾರ ಬಂದ್ ಮಾಡಲಾಗಿದೆ. ಮರಳು ಮೂಟೆ ಅಳವಡಿಸಿದ ನಂತರ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.