
ಕಲಬುರಗಿ,ಮೇ.7-ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಇಡೀ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಚಿತ್ತಾಪುರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಕೋಕಾ ಕಾಯ್ದೆ ಅಡಿ ಕ್ರಮ ಜರುಗಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕಲಬುರಗಿ ನಾಗರೀಕ ಸೌಹಾರ್ದ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಲಾಯಿತು.
ಮಣಿಕಂಠ ರಾಠೋಡ್ ವಿರುದ್ಧ ಕೋಕಾ ಕಾಯ್ದೆ ಅಡಿ ಕ್ರಮ ಜರುಗಿಸಬೇಕು, ಕಲಬುರಗಿ ಉಚ್ಛ ನ್ಯಾಯಾಲಯದಲ್ಲಿ ತನ್ನ ಗಡಿಪಾರು ಆದೇಶದ ವಿರುದ್ಧ ತಂದ ತಡೆಯಾಜ್ಞೆ ತೆರವುಗೊಳಿಸಿ ಆತನನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು, ಕಾನೂನು ಬಾಹಿರವಾಗಿ ಸಂಪಾದಿಸಿರುವ ಹಣದ ಮೂಲವನ್ನು ಪರಿಶೀಲಿಸಿ ಸಂಪೂರ್ಣ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು, ಖರ್ಗೆ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಮನವಿಪತ್ರದಲ್ಲಿ ಒತ್ತಾಯಿಸಲಾಗಿದೆ.
ಕಾಂಗ್ರೆಸ್ ಮುಖಂಡರಾದ ತಿಪ್ಪಣ್ಣಪ್ಪ ಕಮಕನೂರ, ಶ್ಯಾಮ್ ನಾಟಿಕಾರ, ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ, ಕೆ.ನೀಲಾ, ಪ್ರವೀಣ್ ಪಾಟೀಲ ಹರವಾಳ, ಡಾ.ಕಿರಣ್ ದೇಶಮುಖ, ಫಾರುಕ್ ಮಾನಿಯಾಲ್, ಹಣಮಂತ ಯಳಸಂಗಿ, ನಾಗರಾಜ ಗುಂಡಗುರ್ತಿ, ರಾಜು ಸಂಕಾ ಸೇರಿದಂತೆ ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.