ಮಣಿಪುರ ಹಿಂಸಾಚಾರ, ಮೋದಿ ಮೌನ ಕೈ ತರಾಟೆ

ನವದೆಹಲಿ,ಜೂ.೨೮- ಈಶಾನ್ಯ ರಾಜ್ಯಗಳಲ್ಲಿ ಒಂದಾದ ಮಣಿಪುರದಲ್ಲಿನ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.
ಪ್ರಧಾನಿಗೆ ನಿಜವಾಗಿಯೂ ಮಣಿಪುರ ರಾಜ್ಯದ ಜನರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಮುಖ್ಯಮಂತ್ರಿ ಎನ್ ಸಿಂಗ್ ಅವರನ್ನು ವಜಾ ಮಾಡಲಿ ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮಣಿಪುರದಲ್ಲಿ ಕಳೆದ ೨ ತಿಂಗಳಿನಿಂದ ಹಿಂಸಾಚಾರ ಭುಗಿಲೆದ್ದಿದೆ. ಅಶಾಂತಿ, ಅರಾಜಕತೆ ತಾಂಡವವಾಡುತ್ತಿದೆ. ಮಣಿಪುರದಲ್ಲಿ ಶಾಂತಿ ಸ್ಥಾಪನೆ ಮಾಡುವ ಸಂಬಂದ ಒಂದೇ ಒಂದೇ ಬಾರಿ ಪ್ರಧಾನಿ ಪ್ರತಿಕ್ರಿಯಿಸಿಲ್ಲ ಎಂದು ಹರಿಹಾಯ್ದಿದ್ದಾರೆ.
ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದರೂ ಶಾಂತಿ ಕಾಪಾಡಲು ವಿಫಲರಾಗಿರುವ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ವಜಾ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.
ಮಣಿಪುರ ಹಿಂಸಾಚಾರದಿಂದ ನಲುಗಿರುವ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಬೇಕೆಂದರೆ ಮೊದಲು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ವಜಾ ಮಾಡಬೇಕು. ಆ ಮೂಲಕ ಹಿಂಸಾಚಾರಕ್ಕೆ ಕೊನೆ ಹಾಡಬೇಕು ಎಂದು ಒತ್ತಾಯಿಸಿದ್ದಾರೆ.
ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಎಷ್ಟೇ ಪ್ರಚಾರ ಮಾಡಿದರೂ ಮಣಿಪುರದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿನ ಹೀನಾಯ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.
ಮಣಿಪುರದ ಹಿಂಸಾಚಾರ ಭುಗಿಲೇಳಲು ಆಡಳಿತಾರೂಡ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಪಕ್ಷವೇ ನೇರ ಹೊಣೆ ಎಂದು ದೂರಿರುವ ಅವರು ಕಳೆದ ಎರಡು ತಿಂಗಳಿನಿಂದ ಹಿಂಸಾಚಾರ ನಡೆಯುತ್ತಿದ್ದರೂ ಪ್ರಧಾನಿ ಮೌನ ಸರಿಯಲ್ಲ ಎಂದಿದ್ದಾರೆ.