ಮತದಾನ ದಿನ ಪ್ರತಿಯೊಬ್ಬರು ಮತಗಟ್ಟೆಗೆ ತೆರಳಿ ಮತ ಚಲಾಯಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ:ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ವಿಜಯಪುರ:ಮೇ.1: ಸುಭದ್ರ ರಾಷ್ಟ್ರ ನಿರ್ಮಾಣ ಹಾಗೂ ಪ್ರಜಾಪ್ರಭುತ್ವದ ಭದ್ರ ಬುನಾದಿಗಾಗಿ ಮತಾಧಿಕಾgದಿಂದ ವಂಚಿತರಾಗದೇ ಪ್ರತಿಯೊಬ್ಬರು ಮೇ.10 ರಂದು ಜರುಗುವ ಮತದಾನ ‘ದಿನ’ದಂದು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಕರೆ ನೀಡಿದರು.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಭಾನುವಾರ ‘ನಮ್ಮ ನಡೆ ಮತಗಟ್ಟೆ ಕಡೆ’ ಎಂಬ ಧ್ಯೇಯದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಇವರ ಸಂಯುಕ್ತಾಶ್ರಯದಲ್ಲಿ ನಗರದ ಶಿವಾಜಿ ವೃತ್ತದ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ನಂ.3ರ ಆವರಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಚುನಾವಣಾ ಧ್ವಜಾರೋಹಣ ನೆರವೇರಿಸಿ, ಪ್ರತಿಜ್ಞಾ ವಿಧಿ ಬೋಧನೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಹಾಗೂ ಜವಾಬ್ದಾರಿ. ಪ್ರಜಾಪ್ರಭುತ್ವದಲ್ಲಿ ಇಂತಹ ಅವಕಾಶ ಸಂವಿಧಾನ ಕಲ್ಪಿಸಿದೆ. ಸಂವಿಧಾನ ಕೊಡಮಾಡಿದ ಮತಾಧಿಕಾರವನ್ನು ಕಳೆದುಕೊಳ್ಳದೇ ತಪ್ಪದೇ ಮತಗಟ್ಟೆಗೆ ಬಂದು ಮತದಾನ ಮಾಡಬೇಕು. ಮತದಾನ ಮಾಡುವ ಮುಲಕ ಪ್ರಜಾಪ್ರಭುತ್ವ ಹಬ್ಬ ಆಚರಿಸಬೇಕು. 18 ವರ್ಷ ತುಂಬಿದ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು.
ಈ ಬಾರಿ ಜಿಲ್ಲೆಯಲ್ಲಿ ಶೇಕಡಾ ನೂರರಷ್ಟು ಮತದಾನ ಪ್ರಮಾಣ ಹೆಚ್ಚಿಸುವ ಗುರಿ ಹೊಂದಲಾಗಿದೆ. ಗ್ರಾಮಿಣ ಹಾಗೂ ನಗರ ಪ್ರದೇಶದ ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಗುರುತಿಸಿ, ಈ ಸ್ಥಳಗಳಲ್ಲಿ ಸ್ವೀಪ್ ಕಾರ್ಯಚಟುವಟಿಕೆಗಳನ್ನು ವಿಭಿನ್ನವಾಗಿ, ವಿಶಿಷ್ಟವಾಗಿ ಹಾಗೂ ವಿನೂತನವಾಗಿ ಹಮ್ಮಿಕೊಂಡು ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಿ ಹೆಚ್ಚಿನ ಮತದಾನಕ್ಕೆ ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 2072 ಹಾಗೂ ಹೆಚ್ಚುವರಿಯಾಗಿ 6 ಮತಗಟ್ಟೆಗಳು ಸೇರಿದಂತೆ ಒಟ್ಟಾರೆ 2078 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಎಲ್ಲ ಮತಗಟ್ಟೆಗಳಲ್ಲಿ ಬಿಸಿಲಿನ ರಕ್ಷಣೆಗಾಗಿ ನೆರಳು ಒದಗಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಮತದಾರರಿಗೆ ಅನುಕೂಲವಾಗಲು ಕುಡಿಯುವ ನೀರು, ಶೌಚಾಲಯ, ವಿಕಲಚೇತನರಿಗಾಗಿ ರ್ಯಾಂಪ್, ಅಶಕ್ತರಿಗೆ ವ್ಹೀಲ್ ಚೇರ್ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಭಾರತ ಚುನಾವಣಾ ಆಯೊಗದ ನಿರ್ದೇಶನದಂತೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳಲ್ಲಿ ಕಲ್ಪಿಸಿರುವ ಸೌಲಭ್ಯಗಳ ಕುರಿತು ಮತದಾರರು ಮತದಾನಕ್ಕಿಂತ ಮುಂಚಿತವಾಗಿ ಭೇಟಿ ನೀಡಿ, ಮತದಾನ ದಿನ ಯಾವುದೇ ಗೊಂದಲವಾಗದಂತೆ ಮುಂಚಿತವಾಗಿಯೇ ಖಚಿತಪಡಿಸಿಕೊಳ್ಳಬೇಕು. ಇದರಿಂದ ಮತದಾನ ದಿನ ಮತ ಚಲಾವಣೆಗೆ ಸಹಕಾರಿಯಾಗಲಿದೆ. ಪ್ರತಿಯೊಬ್ಬ ಮತದಾರರು ಮುಂಚಿತವಾಗಿಯೇ ಖಚಿತಪಡಿಸಿಕೊಂಡು ಮತದಾರನೇ ಸ್ವಯಂ ಚುನಾವಣಾ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವ ಮೂಲಕ ನೆರೆ ಹೊರೆಯವನ್ನು ಮತದಾನ ಮಹತ್ವ ಕುರಿತು ಸಾರಿ ಹೇಳಿ, ಮತದಾನಕ್ಕೆ ಪ್ರೇರೇಪಿಸಬೇಕು ಎಂದು ಅವರು ಕರೆ ನೀಡಿದರು. ಮತದಾನ ವಿಷಯ ಅತ್ಯಂತ ಮಹತ್ವದ್ದಾಗಿರುವುದರಿಂದ ಯಾರೂ ಕೂಡ ಮತದಾನದಿಂದ ವಂಚಿತರಾಗದೇ ಕಡ್ಡಾಯವಾಗಿ ಮತ ಚಲಾವಣೆಗೆ ಮುಂದಾಗಬೇಕು. ಪ್ರಜಾಪ್ರಭುತ್ವದ ಹಬ್ಬದಲ್ಲಿ ಪ್ರತಿಯೊಬ್ಬರು ಭಾಗಿಯಾಗುವ ಸದಾಶಯದೊಂದಿಗೆ ಚುನಾವಣಾ ಆಯೊಗ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮ ಆಯೋಜಿಸಿದ್ದು, ಪ್ರತಿಯೊಬ್ಬ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಒಳಗೊಂಡು ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಮತದಾನದ ಮೌಲ್ಯವನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಬುನಾದಿ, ಮತದಾರರೇ ಪ್ರಭುಗಳು. ಆಯೋಗ ಮುಕ್ತ, ನ್ಯಾಯಸಮ್ಮತ, ಪಾರದರ್ಶಕ, ಯಶಸ್ವಿ ಜೊತೆಗೆ ಮತಗಟ್ಟೆ ಅವಕಾಶಗಳು ಸೇರಿದಂತೆ ಹಲವು ಧ್ಯೇಯೋದ್ದೇಶಗಳನ್ನು ಒಳಗೊಂಡಿದ್ದು, ಪ್ರತಿಯೊಬ್ಬರುವ ಮತದಾನ ವ್ಯವಸ್ಥೆಯಲ್ಲಿ ಭಾಗವಹಿಸುವುದೇ ಆಯೋಗ ಉದ್ದೇಶವಾಗಿದ್ದು, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಚುನಾವಣಾ ವ್ಯವಸ್ಥೆಯನ್ನು ಬಲಪಡಿಸಿ, ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಕಳೆದ ಚುನಾವಣೆಗಳಲ್ಲಿ ರಾಜ್ಯದ ಸರಾಸರಿ ಮತದಾನ ಪ್ರಮಾಣ ಶೇ.72ರಷ್ಟು ದಾಖಲಾಗಿತ್ತು. ಜಿಲ್ಲೆಯಲ್ಲಿ ಶೇ.70ರಷ್ಟು ದಾಖಲಾಗಿತ್ತು. 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯದ ಸರಾಸರಿ ಮತದಾನ ಪ್ರಮಾಣ ಕಡಿಮೆಯಾಗಿತ್ತು. ಇಂತಹ ಮತಗಟ್ಟೆ ವ್ಯಾಪ್ತಿಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ, ಚುನಾವಣಾ ಆಯೊಗದ ನಿರ್ದೇಶನದಂತೆ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗ್ರಾಮ ಪಂಚಾಯತ್ ಸೇರಿದಂತೆ ನಗರ ಮಟ್ಟದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ಸಮಿತಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಕ್ಕಮಹಾದೇವಿ ವಿಶ್ವವಿದ್ಯಾಲಯ, ಪೋಲಿಸ್ ಇಲಾಖೆ ಒಳಗೊಂಡ ವಿವಿಧ ಇಲಾಖೆಯನ್ನೊಳಗೊಂಡ ಸ್ವೀಪ್ ಸಮಿತಿ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಮತದಾನ ಪ್ರಮಾಣ ಹೆಚ್ಚಿಸಲು ಮನೆ ಮನೆಗೆ ತೆರಳಿ ಜಾಗೃತಿ ಮುಡಿಸಲಾಗುತ್ತಿದೆ. ಜಿಲ್ಲೆಯ ಮತಗಟ್ಟೆಗಳನ್ನು ಸಹ ವಿಭಿನ್ನವಾಗಿ ಸ್ಥಾಪಿಸಲಾಗಿದ್ದು, ಜಿಲ್ಲೆಯ ಒಂದು ಸಾವಿರಕ್ಕೂ ಹೆಚ್ಚಿನ ಮತಗಟ್ಟೆಗಳಲ್ಲಿ ಸುಂದರ ಚಿತ್ರಗಳ ಬಿಡಿಸುವ ಮೂಲಕ ಮತದಾರರನ್ನು ಆಕರ್ಷಿಸಲಾಗಿದೆ. ಮತಗಟ್ಟೆಗಳು ಮತದಾನ ಮಾಡುವಂತೆ ಮತದಾರರನ್ನು ಕೈ ಬಿಸಿ ಕರೆಯುವಂತೆ ವಿನ್ಯಾಸಗೊಳಿಸಲಾಗಿದೆ. ಮತದಾರರು ಸಹ ತನ್ನ ಜವಾಬ್ದಾರಿಯನ್ನು ಅರಿತು ಮೇ.10 ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ಕೈ ಜೋಡಿಸುವಂತೆ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿರೇಶವಾಲಿ, ಸಂಗೀತಾ ಮಠಪತಿ ಅವರಿಂದ ಚುನಾವಣಾ ಜಾಗೃತಿ ಗೀತೆ ಪ್ರಸ್ತುತಪಡಿಸಿದರು. ಕುಮಾರಿ ಶ್ರೇಯಾ ಕವಟಗಿ ಮತದಾನ ಮಹತ್ವ ಕುರಿತು ಮಾತನಾಡಿದಳು.
ಜಿಲ್ಲಾ ಪಂಚಾಯತ್ ಯೋಜನಾ ಉಪನಿರ್ದೇಶಕ ಎ.ಬಿ.ಅಲ್ಲಾಪುರ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ವಿಕಾಸ ಶಾಲೆಯ ವಿದ್ಯಾರ್ಥಿನಿಯರಿಂದ ಆಕರ್ಷಕ ಡೊಳ್ಳು ಕುಣಿತ ಜರುಗಿತು.
ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶ ಶಿರಹಟ್ಟಿಮಠ, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾರಿಕರ ಸಬರಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಸ್ವೀಪ್ ಸಮಿತಿ ಐಕಾನ್‍ಗಳಾದ ಕುಮಾರಿ ಸಹನಾ ಕೂಡಿಗನೂರ, ರಾಜೇಶ ಪವಾರ, ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಶಾಲೆಯ ಮುಖ್ಯೋಪಾಧ್ಯಾಯ ಶಿರಶ್ಯಾಡ್ ಉಪಸ್ಥಿತರಿದ್ದರು.