ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಕರೆ 

ಸಂಜೆವಾಣಿ ವಾರ್ತೆ

ಚಿತ್ರದುರ್ಗ. ಮಾ.೨೨: ನಮ್ಮನ್ನಾಳುವ ಸಮರ್ಥ ಜನನಾಯಕನನ್ನು ಆಯ್ಕೆ ಮಾಡುವ ಮಹತ್ವದ ಕಾರ್ಯದಲ್ಲಿ ಜಿಲ್ಲೆಯ ಎಲ್ಲಾ ಅರ್ಹ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಹಾಗೂ ಮತದಾನ ಮಾಡಲು ಇತರರನ್ನು ಪ್ರೇರೇಪಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಕರೆ ನೀಡಿದರು.ಅವರು  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಮತದಾನ ಮತ್ತು ಚುನಾವಣಾ ನೀತಿಸಂಹಿತೆಯ ಕುರಿತು ಏರ್ಪಡಿಸಲಾಗಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸಾಮಾಜಿಕ ವ್ಯವಸ್ಥೆಯಲ್ಲಿರುವ ನಾವು ಸಂವಿಧಾನ ಆಶಯಗಳಂತೆ ಹಕ್ಕು ಮತ್ತು ಕರ್ತವ್ಯಗಳನ್ನು ಹೊಂದಿದ್ದೇವೆ. ಅಂತೆಯೇ ಪ್ರತಿಯೊಬ್ಬರೂ ಸಕಾಲದಲ್ಲಿ ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದವರು ನುಡಿದರು.ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಹಾಗೂ ಇನ್ನಷ್ಟು ಗಟ್ಟಿಗೊಳಿಸಲು ಮತದಾನ ಉತ್ತಮ ವಿಧಾನವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಮತದಾನದಲ್ಲಿ ತೊಡಗಿಸಿಕೊಳ್ಳಬೇಕು. ಯಾವುದೋ ಸಲ್ಲದ ಕಾರಣಕ್ಕಾಗಿ ಮತದಾನ ಬಹಿಷ್ಕರಿಸುವುದು ಅಥವಾ ಮತದಾನದಿಂದ ಹೊರಗುಳಿಯುವುದು ಕೂಡ ಸರಿಯಲ್ಲ ಎಂದವರು ನುಡಿದರು.ನಗರದ ಪ್ರದೇಶಗಳಲ್ಲಿರುವ ಬಹುಸಂಖ್ಯಾತ ಬುದ್ದಿವಂತರು, ವಿದ್ಯಾವಂತರು ಮತದಾನದಿಂದ ಹೊರಗುಳಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ಚಿತ್ರದುರ್ಗ ನಗರ ಮತ್ತು ಗ್ರಾಮೀಣ ಪ್ರದೇಶದ ಮತದಾರರೆಲ್ಲರೂ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ, ನಿರ್ಭೀತಿಯಿಂದ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಅವರು ಮನವಿ ಮಾಡಿದರು.ನಗರ ಪ್ರದೇಶ ಸೇರಿದಂತೆ ಹಿಂದಿನ ಚುನಾವಣೆ ಸಂದರ್ಭದಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು. ಅಲ್ಲದೇ ನಗರ ನಿವಾಸಿಗಳ ಪ್ರತಿ ಮತದಾರರಿಗೆ ಪ್ರತ್ಯೇಕವಾಗಿ ಪತ್ರ ಬರೆದು ಮನವಿ ಮಾಡಿಕೊಳ್ಳುವುದಾಗಿ ಅವರು ನುಡಿದರು.ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುವ ಚುನಾವಣೆ ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಲು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಅಕ್ರಮ ಚಟುವಟಿಕೆಗಳ ವಿರುದ್ಧ ಹದ್ದಿನಕಣ್ಣಿಡಲಾಗಿದೆ. ವ್ಯವಸ್ಥಿತ ನಿರ್ವಹಣೆಗಾಗಿ ಪ್ರತಿ ತಾಲೂಕುಗಳಿಗೆ ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಹಲವು ಸ್ಥಳಗಳಲ್ಲಿ ಚೆಕ್‌ಪೋಸ್ಟ್ಗಳನ್ನು ರಚಿಸಲಾಗಿದ್ದು, ಅಗತ್ಯ ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ ಎಂದವರು ನುಡಿದರು.