ಮತದಾನ/ಮತದಾನ ಎಣಿಕೆ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಮಂಗಳೂರು, ಮಾ.೨೬- ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಚುನಾವಣೆ-೨೦೨೧ ಕ್ಕೆ ಸಂಬಂಧಿಸಿದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು, ಆರಂಬೋಡಿ, ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾಗೂ ಬಂಟ್ವಾಳ ತಾಲೂಕಿನ ಮಾಣಿಲ, ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾರ್ಚ್ ೨೭ ರಂದು ಸಂಜೆ ೫ ಗಂಟೆಯಿಂದ ಮಾರ್ಚ್ ೨೯ ರಂದು ಸಂಜೆ ೬ ಗಂಟೆಯವರೆಗೆ ಮತ್ತು ಮತ ಎಣಿಕೆ ಸಲುವಾಗಿ ಮಾರ್ಚ್ ೩೦ ರಂದು ಮಧ್ಯರಾತ್ರಿ ೧೨ ಗಂಟೆಯಿಂದ ಮಾರ್ಚ್ ೩೧ ರಂದು ಮದ್ಯರಾತ್ರಿ ೧೨ ಗಂಟೆಯವರೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ಮತದಾನ/ಮತದಾನ ಎಣಿಕೆ ಕೇಂದ್ರಗಳ ೨೦೦ ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ವಿಧಿಸಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಕಲಂ ೧೪೪ ರನ್ವಯ ಪ್ರದತ್ತವಾದ ಅಧಿಕಾರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ಮತದಾನ ಕೇಂದ್ರಗಳ ೨೦೦ ಮೀ ವ್ಯಾಪ್ತಿಯಲ್ಲಿ ಈ ಅವಧಿಯಲ್ಲಿ ಮತದಾನದ ಉದ್ದೇಶದಿಂದ ಮತದಾನಕ್ಕೆ ಬರುವ ಮತದಾರರನ್ನು ಹೊರತುಪಡಿಸಿ ಇತರೇ ವ್ಯಕ್ತಿಗಳು ಸಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಚೂರಿ,ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಠಮಾಡುವುದು, ಸನ್ನೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಪ್ರಸಾರ ಮಾಡುವುದು, ಪ್ರಕಟನಾ ಪತ್ರಿಕೆಗಳ ಅಥವಾ ಇತರೆ ಯಾವುದೇ ವಸ್ತುಗಳ ಪ್ರದರ್ಶನ , ಭಿತ್ತಿಪತ್ರಗಳನ್ನು ಅಚಿಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸವುವ ಕ್ರಮವನ್ನು ನಿಷೇಧಿಸಲಾಗಿದೆ.
ಈ ಆದೇಶವು ಸರ್ಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಣೆ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಹಾಗೂ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಸಿಬ್ಬಂಧಿಗಳು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ.