ಮತದಾರ ಜಾಗೃತಿ ವಿಶೇಷ ಚೇತನರ ಬೈಕ್ ರ್ಯಾಲಿಗೆ ಚಾಲನೆಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ : ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ವಿಜಯಪುರ:ಎ.4: ಮತದಾರರು ಯೋಚಿಸಿ ಮತ ಚಲಾಯಿಸಿ, ಪ್ರಜಾಪ್ರಭುತ್ವ ಯಶಸ್ಸಿಗೆ ಮತದಾನವೇ ಭದ್ರ ಬುನಾದಿ. ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು, ಪ್ರತಿ ಮತ ದೇಶದ ಅಭ್ಯುದಯಕ್ಕೆ ಉಪಯುಕ್ತವಾಗಿದೆ. ಮತದಾರರು ತಮ್ಮ ಮತ ಮೌಲ್ಯ ಅರಿತು ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮತದಾರರ ಜಾಗೃತಿ ಹಮ್ಮಿಕೊಂಡ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳ ಮೂಲಕ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು. 18 ವರ್ಷ ಮಯೋಮಾನದ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು. ಇದೇ ಮೇ-10 ಬುಧವಾರ ರಂದು ಬರುವ ಪ್ರಜಾಪ್ರಭುತ್ವ ಹಬ್ಬದಲ್ಲಿ ಪ್ರತಿಯೊಬ್ಬ ಮತದಾರ ಭಾಗವಹಿಸಿ ತಪ್ಪದೇ ಮತ ಚಲಾಯಿಸಿ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಹೇಳಿದರು.
ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ಪ್ರಾಶಸ್ತ್ಯ ನೀಡಲಾಗಿದ್ದು, ಅವರಿಗಾಗಿ ಮತದಾನ ದಿನದಂದು ಮತಗಟ್ಟೆ ಅವಶ್ಯಕ ಸೌಲಭ್ಯ ಒದಗಿಸಿದೆ.ಮತದಾನ ಕುರಿತು ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ವಿಶೇಷಚೇತನರು ಮತ್ತು ಹಿರಿಯ ನಾಗರಿಕರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ, ಸ್ವೀಪ್ ಕಾರ್ಯ ಚಟುವಟಿಕೆಗಳ ಮೂಲಕ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ, ಪಟ್ಟಣ, ತಾಲೂಕು, , ನಗರ ಪ್ರದೇಶವೂ ಸೇರಿದಂತೆ ಎಲ್ಲ ಕಡೆಯಲ್ಲೂ ಜಿಲ್ಲಾ ಸ್ವೀಪ್ ವತಿಯಿಂದ ಮತದಾನದ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ಸಹ ಸ್ವಯಂ ಪ್ರೇರಣೆಯಿಂದ ತಮ್ಮ ಜವಾಬ್ದಾರಿಯನ್ನರಿತು ಯಾವುದೇ ಆಸೆ ಆಮೀಷಕ್ಕೆ ಒಳಗಾಗದೇ, ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು.
ಬೈಕ್ ರ್ಯಾಲಿ: ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರಿಂದ ಬೈಕ್ – ತ್ರಿಚಕ್ರ ವಾಹನ ರ್ಯಾಲಿ ಜಿಲ್ಲಾ ಆಸ್ಪತ್ರೆಯಿಂದ ಆರಂಭಗೊಂಡು,ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಂದಗಲ್ ಶ್ರೀ ರಂಗಮಂದಿರ ಆವರಣದಲ್ಲಿ ಸಮಾವೇಶಗೊಂಡಿತು.
ಮತದಾರರ ಪ್ರತಿಜ್ಞಾವಿಧಿ ಭೋಧನೆ: ಪ್ರಜಾಪ್ರಭುತ್ವದಲ್ಲಿ ದೃಡವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೆಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ ಎಂದು ಪ್ರತಿಜ್ಞೆಯನ್ನು ಬೊಧಿಸಲಾಯಿತು.
ಘೋಷ ವಾಕ್ಯ: ತ್ರಿಚಕ್ರ-ಬೈಕ್ ರ್ಯಾಲಿಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯಲು ನಮೂನೆ 7 ಬಳಸಿ, ಮಾಡಿ ಮಾಡಿ ಮತದಾನ ಮಾಡಿ, ಮತದಾನ ನಮ್ಮ ಹಕ್ಕು, ಹೆಸರು ನೋಂದಾಯಿಸಲು ನಮೂನೆ 6 ಬಳಸಿ, ನೋಂದಾಯಿಸಿ ನೋಂದಾಯಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ನೋಂದಾಯಿಸಿ ಎಂಬಿತ್ಯಾದಿ ಘೋಷ ವಾಕ್ಯ ದಾರಿಯುದ್ದಕ್ಕೂ ಮೊಳಗಿದವು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ , ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್ ಎಲ್. ಲಕ್ಕಣ್ಣವರ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಪತ್ರಾಧಿಕಾರಿ ರಾಮಣ್ಣ ಅಥಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ, ಕೆ.ಕೆ. ಚವ್ಹಾಣ, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿದೇರ್ಶಕ ಅಮರೇಶ ದೊಡಮನಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್ ಜಿ ಲೋಣಿ, ಜಿಲ್ಲಾ ಪಂಚಾಯತಿಯ ಯೋಜನಾ ಉಪ ನಿರ್ದೇಶಕ ಎ.ಬಿ.ಅಲ್ಲಾಪೂರ, ಜಿಲ್ಲಾ ಸ್ವಿಪ್ ಸಮಿತಿಯ ಸದಸ್ಯರು, ಜಿಲ್ಲಾ ವಿಕಲಚೇತನರ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.