ಮತ್ತೆ ಒಕ್ಕರಿಸಿದ ಕೊರೊನಾ: 66 ವಿದ್ಯಾರ್ಥಿಗಳಲ್ಲಿ ಸೋಂಕು

ಧಾರವಾಡ, ನ 25: ಕೊರೊನಾಮುಕ್ತ ಜಿಲ್ಲೆಯಾಗಿದ್ದ ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಮತ್ತೆ ಅಬ್ಬರಿಸಿದ್ದು, ಇಲ್ಲಿನ ಎಸ್‍ಡಿಎಮ್ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ.
ಆರಂಭದಲ್ಲಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರಿಂದಾಗಿ ಒಟ್ಟು 300 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಈ ತಪಾಸಣೆ ವೇಳೆಗೆ ಒಟ್ಟು 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಜಿಲ್ಲಾಧಿಕಾರಿ ಭೇಟಿ:
ಎಸ್‍ಡಿಎಮ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸ್ಥಿತಿಗತಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ 300 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 66 ಜನ ವಿದ್ಯಾರ್ಥಿಗಳ ಫಲಿತಾಂಶ ಪಾಸಿಟಿವ್ ವರದಿಯಾಗಿದೆ. ಅವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.
ಆಸ್ಪತ್ರೆಯ ಮೂರುಸಾವಿರ ಸಿಬ್ಬಂದಿಗೂ ಕೋವಿಡ್ ಟೆಸ್ಟ್ ಮಾಡಿ, ಅವರಿಗೂ ಪಾಸಿಟಿವ್ ವರದಿಯಾದರೆ ಚಿಕಿತ್ಸೆ ನೀಡಲಾಗುತ್ತದೆ ಎಂದ ಅವರು, ಈಗಾಗಲೇ ಎರೆಡು ಹಾಸ್ಟೆಲ್‍ಗಳನ್ನು ಸೀಲ್‍ಡೌನ್ ಮಾಡಿ ಒಳಗಡೆ ಸೂಕ್ತ ಚಿಕಿತ್ಸೆ, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಕಳೆದ ವಾರದ ಹಿಂದೆ ನಡೆದ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಕೋವಿಡ್ ಪಾಸಿಟಿವ್ ಪತ್ತೆಯಾಗಿದ್ದು, ಇದರಲ್ಲಿ ಭಾಗವಹಿಸಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ ಎಂದು ಹೇಳಿದರು.
ಈಗಾಗಲೇ ಕಾಲೇಜಿನ ವಿದ್ಯಾರ್ಥಿಗಳಿಗೆಲ್ಲ ಕೋವಿಡ್ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ ಎಂದವರು ತಿಳಿಸಿದರು.