ಮತ್ತೆ ಮೋದಿ ಪ್ರಧಾನಿ ಮಾಡಲು ಬಿಜೆಪಿ ಬೆಂಬಲಿಸಿ: ಛಲವಾದಿ ನಾರಾಯಣಸ್ವಾಮಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.24:- ಕಳೆದ 10 ವರ್ಷದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಡಳಿತದಲ್ಲಿ ಯಾವುದೇ ಹಗರಣವಿಲ್ಲದೆ ಸ್ವಚ್ಛ ಆಡಳಿತ ನೀಡಿರುವ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಬಿಜೆಪಿಯನ್ನು ಬೆಂಬಲಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿಮನವಿ ಮಾಡಿದರು.
ನಗರದ ಶಿವಕುಮಾರಸ್ವಾಮಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ನಡೆದ ಬಲವರ್ಧನೆಗಾಗಿ ಭೀಮ ಸಮಾವೇಶದಲ್ಲಿ ಮಾತನಾಡಿದ ಅವರು ಹಿಂದಿನ ಯುಪಿಎ ಸರ್ಕಾರದಲ್ಲಿ ಲಕ್ಷಾಂತರ ಕೋಟಿ ಹಗರಣ ನಡೆದಿದ್ದು, ಕಾಂಗ್ರೆಸ್ ಪಕ್ಷದ ಬಹಳಷ್ಟು ಮಂದಿ ಇನ್ನೂ ಬೇಲ್ ನಲ್ಲಿದ್ದಾರೆ. 60 ವರ್ಷಗಳ ಕಾಲ ಆಡಳಿತ ನಡೆಸಿದ ಅವರು ದಲಿತರನ್ನು ಕಡೆಗಣಿಸುತ್ತಾ ಬಂದಿದ್ದಾರೆ. ಅಲ್ಲದೆ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡದೇ ದಲಿತ ಸಮಾಜದ ಮತಗಳನ್ನು ಪಡೆದು ವಂಚನೆ ಮಾಡಿದ್ದಾರೆ. ಹೀಗಾಗಿ ಎಚ್ಚೆತ್ತು ಈ ಬಾರಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಅವರನ್ನು ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ಹೇಳಿದರು.
ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಮಾತನಾಡಿ, ಚಾಮರಾಜನಗರದ ಶಾಂತಿ, ಸೌಹಾರ್ದತೆ ಕಾಪಾಡಲು ಉತ್ತಮ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಜಯಶೀಲರನ್ನಾಗಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್ ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಎಸ್ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ಮುತ್ತಿಗೆ ಮೂರ್ತಿ, ನಗರಸಭಾ ಸದಸ್ಯೆ ಕುಮದಾ ಕೇಶವಮೂರ್ತಿ, ಜೆಡಿಎಸ್ ಮುಖಂಡರಾದ ಪುಟ್ಟಸ್ವಾಮಿ, ಬಿಜೆಪಿ ಮುಖಂಡರಾದ ಕೂಡ್ಲೂರು ಶ್ರೀಧರಮೂರ್ತಿ, ಮಲ್ಲೇದೇವರು, ಆಲೂರು ಪರಶಿವಮೂರ್ತಿ, ಸಿ.ಎಂ. ಕೃಷ್ಣಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು.