ಮತ ಎಣಿಕೆ ಕೇಂದ್ರಕ್ಕೆ ಡಿ.ಸಿ. ಭೇಟಿ

ಕಲಬುರಗಿ.ಡಿ.29:ಕಲಬುರಗಿ ತಾಲೂಕಿನ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಡಿಸೆಂಬರ್ 30 ರಂದು ಬೆಳಿಗ್ಗೆ 8 ಗಂಟೆಯಿಂದ ಸರ್ಕಾರಿ ಪಾಲಿಟೆಕ್ನಿಕ್ ಕಲಬುರಗಿ ಇಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಕೇಂದ್ರಕ್ಕೆ ಭೇಟಿ ನೀಡಿ ಮತ ಎಣಿಕೆ ಕಾರ್ಯದ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು.
ಕಲಬುರಗಿ ತಾಲೂಕಿನ 28 ಗ್ರಾಮ ಪಂಚಾಯಿತಿಗಳ ಮತ ಎಣಿಕೆಗಾಗಿ ಒಟ್ಟಾರೆ 60 ಟೇಬಲ್‍ಗಳನ್ನು ಹಾಕಲಾಗಿದ್ದು, ಮೂರು ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಪ್ರತಿ ಗ್ರಾಮ ಪಂಚಾಯಿತಿಗೆ ಮತ ಎಣಿಕೆಗಾಗಿ ಎರಡು ಟೇಬಲ್‍ಗಳನ್ನು ನಿಗದಿಪಡಿಸಿದ್ದು, ಹೆಚ್ಚಿನ ಸ್ಥಾನ ಹೊಂದಿರುವ ಗ್ರಾಮ ಪಂಚಾಯಿತಿಗಳಿಗೆ ಎರಡು ಹೆಚ್ಚುವರಿ ಟೇಬಲ್ ವ್ಯವಸ್ಥೆ ಮಾಡಲಾಗಿದೆ ಎಂದು ತಹಶೀಲ್ದಾರರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಎಣಿಕೆ ಸಿಬ್ಬಂದಿಗಳು ಎಲ್ಲಾ ಸುರಕ್ಷತಾ ಕ್ರಮದೊಂದಿಗೆ ಎಣಿಕೆ ಕಾರ್ಯದಲ್ಲಿ ಭಾಗಿಯಾಗಬೇಕು. ಯಾವುದೇ ಅನಾಹುತಗಳು ಆಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮತ ಎಣಿಕೆ ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ನಿರ್ದೇಶನ ನೀಡಿದರು.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಲಬುರಗಿ ಸಹಾಯಕ ಆಯುಕ್ತ ಬಲರಾಂ ಲಮಾಣಿ, ಕಲಬುರಗಿ ತಹಶೀಲ್ದಾರ ಸಂಗಯ್ಯ ಸ್ವಾಮಿ ಹಾಗೂ ಐ.ಪಿ.ಎಸ್. ಪ್ರೊಬೇಷನರಿ ಅಧಿಕಾರಿ ಅನ್ಶುಕುಮಾರ್ ಉಪಸ್ಥಿತರಿದ್ದರು.