ಮತ ಪ್ರಮಾಣ ಹೆಚ್ಚಳಕ್ಕೆ ಗಿರಿನಾಥ್ ಸೂಚನೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ, ಮೇಲ್ವಿಚಾರಕರಿಗೆ ಇಂದು ಜಯನಗರದ ವಿಜಯಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಮಾತನಾಡುತ್ತಿರುವುದು.

ಬೆಂಗಳೂರು, ಮಾ.೨೨- ಮತದಾನದ ಪ್ರಮಾಣ ಕಡಿಮೆಯಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಈ ಬಾರಿ ಹೆಚ್ಚು ಆದ್ಯತೆ ನೀಡಿ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದಲ್ಲಿಂದು ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ರ ಸಂಬಂಧ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಜಯ ಕಾಲೇಜಿನಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಹಾಗೂ ಮೇಲ್ವಿಚಾರಕರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಗರದಲ್ಲಿ ಪ್ರತಿ ಚುನಾವಣೆಯಲ್ಲೂ ಮತದಾನ ಮಾಡುವಾಗ ನಿಗದಿತ ಶೇಖಡವಾರು ಪ್ರಮಾಣ ತಲುಪಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಬೂತ್ ಮಟ್ಟದ ಮೇಲ್ವಿಚಾರಕರು ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡಬೇಕೆಂದು ತಿಳಿಸಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬರುವ ಮತಗಟ್ಟೆಗಳ ಪೈಕಿ ಕಳೆದ ಬಾರಿ ಸುಮಾರು ೯೩೫ ಮತಗಟ್ಟೆಗಳಲ್ಲಿ ಮತದಾನದ ಪ್ರಮಾಣ ಶೇಖಡವಾರು ಕಡಿಮೆಯಾಗಿರುತ್ತದೆ. ಈ ಸಂಬಂಧ ಆಯಾ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆ-ಮನೆಗೆ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ತಪ್ಪದೆ ಮತದಾನ ಮಾಡಲು ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.
ಮತದಾರರು ವೋಟರ್ ಹೆಲ್ಪ್ ಲೈನ್‌ಗೆ ಭೇಟಿ ನೀಡಿ ಮತದಾನ ಗುರುತಿನ ಚೀಟಿಯ ಸಂಖ್ಯೆ ನಮೂಸಿದರೆ ಸಾಕು ಮತಗಟ್ಟೆ ಹಾಗೂ ವಿಳಾಸದ ಲಭ್ಯವಾಗಲಿದೆ. ಇದೀಗ ಮತಗಟ್ಟೆಗೆ ಲೊಕೆಶನ್ ಹಾಕಿಕೊಂಡು ತೆರಳಲು ಸಾಪ್ಟ್ ವೇರ್ ಕೂಡಾ ಸಿದ್ದಪಡಿಸಲಾಗುತ್ತಿದೆ ಎಂದು ಹೇಳಿದರು.
ಲೋಕಸಭಾ ಚುನಾವಣಗೆ ಏಪ್ರಿಲ್ ೨೬ ರಂದು ಮತದಾನ ನಡೆಯಲಿದ್ದು, ಎಲ್ಲರೂ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಪ್ರೇರೇಪಿಸಬೇಕು. ಬೂತ್ ಮಟ್ಟದಲ್ಲಿ ಮೂಕ್ರೊ ಲೆವೆಲ್ ಕಾರ್ಯಕ್ರಮಗಳನ್ನು ರೂಪಿಸಿಕೊಂಡು, ಮತಗಟ್ಟೆಗೆ ನಿಗದಿಯಾಗಿರುವ ಶೇಕಡವಾರು ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂದರು.
ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಕಾಂತರಾಜು ಮಾತನಾಡಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೭ ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ಪೂರ್ವಭಾವಿಯಾಗಿ ತರಬೇರತಿಯನ್ನು ನೀಡಲಾಗುತ್ತಿದೆ ಎಂದರು.
ಈ ವೇಳೆ ಬೆಂಗಳೂರು ನಗರ ಜಿಲ್ಲೆಯ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ಬೆಂಗಳೂರು ಲೋಕಸಭಾ ಕ್ಷೇತ್ರದ ಸ್ವೀಪ್ ನೋಡಲ್ ಅಧಿಕಾರಿ ಲಕ್ಷ್ಮಿದೇವಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.