ಮನೆ ಮನೆಗೆ ತೆರಳಿ ಎನ್.ಎಚ್.ಶಿವಶಂಕರರೆಡ್ಡಿ ಪ್ರಚಾರ

ಗೌರಿಬಿದನೂರು, ಏ.೨೭- ನಗರದ ವಿವಿಧ ವಾರ್ಡ್ ಗಳಲ್ಲಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಹಾಗೂ ಅವರ ಬೆಂಬಲಿಗರು ಮನೆಮನೆಗೆ ತೆರಳಿ ವಿಧಾನಸಭೆ ಚುನಾವಣೆಯ ಅಂಗವಾಗಿ ಮತಯಾಚನೆ ಮಾಡಿದರು.
ಈ ವೇಳೆ ಮಾತನಾಡಿದ ಎನ್.ಎಚ್.ಶಿವಶಂಕರರೆಡ್ಡಿ, ಕಳೆದ ೨೫ ವರ್ಷಗಳಿಂದ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ನಮಗೆ ಶ್ರೀರಕ್ಷೆಯಾಗಿವೆ. ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಶ್ರಮಿಸಿದ್ದು ಉಳಿದಂತೆ ನಗರೋತ್ಥಾನ ಯೋಜನೆಯಡಿಯಲ್ಲಿ ಹಂತಹಂತವಾಗಿ ಅನುಷ್ಟಾನಗೊಳಿಸಲಾಗುವುದು. ನಾಗರೀಕರು ಈ ಬಾರಿಯ ಚುನಾವಣೆಯಲ್ಲಿ ಜನತೆ ಆಶೀರ್ವಾದ ಮಾಡುವ ಮೂಲಕ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ಅವಕಾಶ ನೀಡಬೇಕಾಗಿದೆ ಎಂದರು.
ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪಕ್ಷೇತರರು ಯುವ ಜನತೆಗೆ ಹಣದಾಸೆ ನೀಡಿ ದಿಕ್ಕುತಪ್ಪಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ಸಮಾಜದ ಸ್ವಾಸ್ಥ್ಯ ಮತ್ತು ಸಾಮರಸ್ಯ ಹದಗೆಡುತ್ತಿದೆ. ಈ ಬಾರಿ ಮತದಾರರು ಪಕ್ಷೇತರರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಹೇಳಿದರು.