ಮರಾಠಾ ಅಭಿವೃದ್ಧಿ ಪ್ರಾಧಿಕಾರ ದೀಪಾವಳಿ ಕೊಡುಗೆ: ನಾಗಮಾರಪಳ್ಳಿ

ಬೀದರ, ನ.16: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮರಾಠರಿಗೆ ದೀಪಾವಳಿ ಕೊಡುಗೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಪ್ರತಿಕ್ರಿಯಿಸಿದ್ದಾರೆ.
ಪ್ರಾಧಿಕಾರ ರಚನೆ ಮರಾಠರ ಬಹುದಿನಗಳ ಬೇಡಿಕೆಯಾಗಿತ್ತು. ಈ ಬಗ್ಗೆ ಅನೇಕ ಬಾರಿ ಸರ್ಕಾರದ ಗಮನ ಸೆಳೆದಿದ್ದೆ ಎಂದು ಅವರು ಸ್ಮರಿಸಿದ್ದಾರೆ.
ಬಸವಕಲ್ಯಾಣಕ್ಕೆ ಈಚೆಗೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮರಾಠಾ ಸಮಾಜದ ಬೇಡಿಕೆಗೆ ಸರ್ಕಾರ ಸ್ಪಂದಿಸಲಿದೆ ಎನ್ನುವ ಭರವಸೆ ನೀಡಿದ್ದರು. ತಕ್ಷಣ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಹಾಗೂ ಅದಕ್ಕೆ ರೂ. 50 ಕೋಟಿ ಅನುದಾನ ಮೀಸಲಿಟ್ಟಿರುವ ಆದೇಶ ಹೊರ ಬಿದ್ದಿದೆ. ಈ ಮೂಲಕ ವಿಜಯೇಂದ್ರ ಅವರು ನುಡಿದಂತೆ ನಡೆದುಕೊಂಡಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಬಿಜೆಪಿ ಸರ್ಕಾರ ಮರಾಠರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ. ಪ್ರಾಧಿಕಾರವು ಮರಾಠಾ ಸಮಾಜದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ನೆರವಾಗಲಿದೆ. ಪ್ರಾಧಿಕಾರ ರಚಿಸಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅದಕ್ಕೆ ಪ್ರಯತ್ನಿಸಿದ ಬಿ.ವೈ. ವಿಜಯೇಂದ್ರ ಅವರಿಗೆ ಕೃತಜ್ಞತೆ ಅರ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅದೇ ರೀತಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ್ ಮಂಠಾಳಕರ್, ಸಂಸದ ಭಗವಂತ್ ಖೂಬಾ ಅವರು ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸ್ವಾಗತಿಸಿದ್ದಾರೆ.