ಮರಾಠಿಗೆ ಮೀಸಲಾತಿ ಮೋದಿ ಜತೆ ಚರ್ಚೆಗೆ ಠಾಕ್ರೆ ನಿರ್ಧಾರ

ಮುಂಬೈ .ಸೆಪ್ಟೆಂಬರ್ ೧೨- ಮಹಾರಾಷ್ಟ್ರದ ಮರಾಠ ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ಕಲ್ಪಿಸುವ ಸಂಬಂಧ ಸರ್ವೋಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ತಡೆಯಾಜ್ಞೆ ಹಾಗೂ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೇಳಿದ್ದಾರೆ.
೨೦೧೮ರ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳ ಕಾಯ್ದೆಯಡಿ ಇರುವ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಲು ಕಾಲೇಜುಗಳಿಗೆ ಪ್ರವೇಶ ಪಡೆಯಲು ಯತ್ನಿಸುವ ವಿದ್ಯಾರ್ಥಿಗಳ ಹಿತರಕ್ಷಣೆ ಮಾಡುವ ಉದ್ದೇಶಕ್ಕಾಗಿ ಮೀಸಲಾತಿ ಸೌಲಭ್ಯ ಕಲ್ಪಿಸುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಮರಾಠ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಸಂಬಂಧ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಬುಧವಾರ ಸಂವಿಧಾನ ಪೀಠಕ್ಕೆ .ವರ್ಗಾಯಿಸಿದೆ.
ಮೀಸಲಾತಿ ಕುರಿತು ಸರ್ವೋಚ್ಚನ್ಯಾಯಾಲಯ ಕೈಗೊಂಡಿರುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡುವ ಮೂಲಕ ತನ್ನ ನಿಲುವನ್ನು ಪ್ರಕಟಿಸಬೇಕೆಂದು ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.
ಮೀಸಲಾತಿ ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ನೇಮಕ ಮಾಡಿದ ಸಚಿವ ಸಂಪುಟದ ಉಪಸಮಿತಿ ನೀಡಿರುವ ವರದಿಯನ್ನಾಧರಸಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ಎಲ್ಲಾ ಆಯಾಮಗಳಿಂದಲೂ ಉದ್ಧವ್ ಠಾಕ್ರೆ ಅವರು ಪರಿಶೀಲನೆ ಮಾಡುತ್ತಿದ್ದಾರೆ.
ಕಳೆದ ಮೂರು ದಿನಗಳಿಂದ ಈ ವಿಚಾರದಲ್ಲಿ ಉದ್ಧವ್ ಠಾಕ್ರೆ ಅವರ ನೇತೃತ್ವದ ಮಹಾರಾಷ್ಟ್ರ ವಿಕಾಸ್ ಆಗಾದಿ ಸರ್ಕಾರ ಸಚಿವರು ಹಾಗೂ ಸಮುದಾಯದ ಮುಖಂಡರ ಸರಣಿ ಸಭೆಗಳನ್ನು ನಡೆಸಲಾಗಿದೆ.