ಮರಾಠ ನಿಗಮ ಉದ್ಘಾಟನೆ 19 ರಂದು

ಬೀದರ್: ಜು.17:ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಉದ್ಘಾಟನಾ ಸಮಾರಂಭ ಜುಲೈ 19 ರಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಮರಾಠ ಸೇವಾ ಸಂಘದ ವೀರ ಭಗತ್‍ಸಿಂಗ್ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ವೆಂಕಟೇಶರಾವ್ ಮಾಯಿಂದೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಗಮ ಉದ್ಘಾಟಿಸುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿಗಮದ ಅಂತರ್ಜಾಲ ತಾಣ ಲೋಕಾರ್ಪಣೆ ಮಾಡುವರು. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿಗಮದ ಯೋಜನೆಗಳ ಕರಪತ್ರ ಬಿಡುಗಡೆಗೊಳಿಸುವರು. ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅಧ್ಯಕ್ಷತೆ ವಹಿಸುವರು. ಮರಾಠ ಜಗದ್ಗುರು ಮಂಜುನಾಥ ಭಾರತಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ನಿಗಮದ ಅಧ್ಯಕ್ಷ ಎಂ.ಜಿ. ಮುಳೆ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದು ಹೇಳಿದ್ದಾರೆ.

ರಾಜ್ಯದ ಮರಾಠರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ನಿಗಮ ರಚಿಸಿದೆ. ಜಿಲ್ಲೆಯವರೇ ಆದ ಮಾಜಿ ಶಾಸಕ ಎಂ.ಜಿ. ಮುಳೆ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇದೀಗ ನಿಗಮ ಕಾರ್ಯಾರಂಭವೂ ಮಾಡಲಿರುವುದು ಮರಾಠರಿಗೆ ಬಹಳ ಸಂತಸ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮರಾಠ ಸಮಾಜವು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ನಿಗಮವು ಸಮಾಜದವರ ಅಭಿವೃದ್ಧಿಗೆ ನೆರವಾಗಲಿದೆ. ನಿಗಮದ ಅಧ್ಯಕ್ಷರು ಈ ದಿಸೆಯಲ್ಲಿ ಕಾರ್ಯನಿರ್ವಹಿಸುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಮರಾಠ ಸಮಾಜದವರು ನಿಗಮದ ಉದ್ಘಾಟನಾ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.