ಮಲೆನಾಡು, ಕರಾವಳಿಯಲ್ಲಿ ವರ್ಷಧಾರೆ

ಬೆಂಗಳೂರು, ಜೂ.೧೦- ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆಯಿಂದಾಗಿ ನದಿಗಳಿಗೆ ನೀರು ಹರಿದು ಬರುತ್ತಿದೆ. ಇದರಿಂದ ಜಲಾಶಯಗಳ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚುತ್ತಿದೆ.ಮಲೆನಾಡಿನ ಹಾಗೂ ಕರಾವಳಿ ಭಾಗದಲ್ಲೂ ಮಳೆಯಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಡಲತೀರಕ್ಕೆ ತೆರಳದಂತೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರು ರಾಷ್ಟ್ರೀಯ ಹೆದ್ದಾರಿ ೬೬ರ ಕಾರವಾರ ಚತುಷ್ಪಥ ಮಾರ್ಗದ ಎರಡು ಸುರಂಗಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಜತೆಗೆ ತಣ್ಣನೆಯ ಗಾಳಿಯೂ ಬೀಸುತ್ತಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಶ್ಚಿಮಘಟ್ಟ ಪ್ರದೇಶದಲ್ಲಿ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.
ಕಣಕುಂಬಿಯಲ್ಲಿ ೧೦೦ ಮಿ.ಮೀ, ಜಾಂಬೋಟಿಯಲ್ಲಿ ೮೦ ಮಿ.ಮೀ ಮಳೆಯಾಗಿದೆ.