ಮಳೆಹಾನಿಯ ಬಗ್ಗೆ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ

ನ್ಯಾಮತಿ.ಆ.4;   ಮಳೆಯಿಂದಾಗಿ ಅವಳಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳ ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು ಹಾನಿಯ ಬಗ್ಗೆ ಅಧಿಕಾರಿಗಳು ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿರುವುದಾಗಿ ತಿಳಿಸಿದರು.ತಾಲೂಕಿನ ಮಾದನಬಾವಿ ಸಮೀಪ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕನ್ನು ಸಂಪರ್ಕಿಸುವ ರಾಜ್ಯಹೆದ್ದಾರಿ ನೀರಿನಲ್ಲಿ ಕೊಚ್ಚಿಹೋಗಿದ್ದು ಅವಳಿ ತಾಲೂಕಿನ ಸಂಪರ್ಕ ಕಡಿತಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು, ವಾಹನ ಸವಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೇ, ಕೂಡಲೇ ರಸ್ತೆ ದುರಸ್ಥಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು..ದಾನಿಹಳ್ಳಿ ಹಾಗೂ ನ್ಯಾಮತಿ ಸಂಪರ್ಕಿಸುವ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದ್ದು ಎರಡು ಗ್ರಾಮಗಳ ನಡುವಿನ ಸಂಪರ್ಕ ಕಡಿತಗೊಂಡಿದೇ, ಅಷ್ಟೇ ಅಲ್ಲದೇ ಮೆಕ್ಕೆಜೋಳ ಬೆಳೆ ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಸಾಕಷ್ಟು ಹಾನಿ ಉಂಟುಮಾಡಿದೆ ಅಲ್ಲದೇ, ಮಳೆಯಿಂದಾಗಿ ಸಾಕಷ್ಟು ವಿದ್ಯುತ್ ಕಂಬಗಳು ಧರೆಶಾಯಿಯಾಗಿದ್ದು, ಕೂಡಲೇ ಅಧಿಕಾರಿಗಳು ಹಾನಿಯ ಬಗ್ಗೆ ಸಮಗ್ರ ಮಾಹಿತಿ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು. ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾದ್ಯಂತ ರಸ್ತೆಗಳು, ಸೇತುವೆಗಳು, ಸೇರಿದಂತೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು ಯಾರೂ ಕೂಡ ರಜೆ ಮೇಲೆ ತೆರಳದೇ ಮಳೆಹಾನಿಯ ಬಗ್ಗೆ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿರುವುದಾಗಿ ತಿಳಿಸಿದರು.