ಮಳೆ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ವಿತರಣೆ

ಅರಸೀಕೆರೆ, ಆ. ೧- ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಈಡಿಗರ ಕಾಲೋನಿಯ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅಪಾರ ನಷ್ಟವಾಗಿದೆ. ಶಾಸಕ ಕೆ. ಎಂ. ಶಿವಲಿಂಗೇಗೌಡ ಹಾಗೂ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರವಾಗಿ ೮ ಕುಟುಂಬಗಳಿಗೆ ತಲಾ ೧೦ ಸಾವಿರ ರೂ. ಪರಿಹಾರದ ಹಣವನ್ನು ವಿತರಿಸಿ ಸಾಂತ್ವನ ಹೇಳಿದರು.
ಪರಿಹಾರ ವಿತರಣೆ ಮಾಡಿ ಮಾತನಾಡಿದ ಶಾಸಕ ಶಿವಲಿಂಗೇಗೌಡ ಅವರು, ಭಾರೀ ಮಳೆಯಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆಯ ನೀರು ಮನೆಗಳಿಗೆ ನುಗ್ಗಿ ತೀವ್ರ ಹಾನಿ ಉಂಟಾಗಿದೆ. ಮೂಲಭೂತ ಸೌಕರ್ಯಗಳನ್ನು ಶೀಘ್ರವಾಗಿ ಒದಗಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್, ಕಂದಾಯ ಇಲಾಖೆ ನಿರೀಕ್ಷಕರು, ನಗರಸಭೆ ಉಪಾಧ್ಯಕ್ಷ ಕಾಂತೇಶ್, ನಗರಸಭೆ ಸದಸ್ಯ ವೆಂಕಟಮುನಿ, ಪ್ರೇಮ ಮಲ್ಲಿಕಾರ್ಜುನ್, ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು.