ಮಳೆ ಹಾನಿ: ಟಾಸ್ಕ್‌ಫೋರ್ಸ್ ಸಭೆ

ಸಿರಾ, ಆ. ೫- ಶಾಸಕ ಡಾ.ಸಿ.ಎಂ ರಾಜೇಶ್‌ಗೌಡ ರವರ ಅಧ್ಯಕ್ಷತೆಯಲ್ಲಿ ಸಿರಾದ ಮಿನಿ ವಿಧಾನಸೌಧದ ತಾಲ್ಲೂಕ ಕಚೇರಿ ಸಭಾಂಗಣದಲ್ಲಿ ಟಾಸ್ಕ್‌ಫೋರ್ಸ್ ಸಭೆ ನಡೆಸಲಾಯಿತು.
ತಾಲ್ಲೂಕಿನಾದ್ಯಂತ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಸಂಭವಿಸಿರುವ ಹಾನಿಯ ಬಗ್ಗೆ ಮಾಹಿತಿ ಪಡೆದು, ಮಳೆಯಿಂದ ಮನೆ, ಬೆಳೆ ಹಾಗೂ ಜಾನುವಾರಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿರುವವರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ, ಕೆರೆ-ಕಟ್ಟೆಗಳು ತುಂಬಿರುವುದರಿಂದ ಯಾವುದೇ ಹಾನಿಗಳಾಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡು ಜನರ ಪ್ರಾಣ ರಕ್ಷಣೆಗೆ ಮುಂದಾಗಬೇಕು ಎಂದು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಮಮತಾ, ಉಪ ತಹಶೀಲ್ದಾರ್ ಮಂಜುನಾಥ್, ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾ ಅಧಿಕಾರಿ ಅನಂತರಾಜ್, ನಗರಸಭೆ ಆಯುಕ್ತ ಶ್ರೀನಿವಾಸ್, ವೃತ್ತ ನಿರೀಕ್ಷಕ ಹನುಮಂತಪ್ಪ, ಕಸಬಾ ಕಂದಾಯ ನಿರೀಕ್ಷಕ ಮಂಜುನಾಥ್ ಸೇರಿದಂತೆ ಕಂದಾಯ ನಿರೀಕ್ಷಕರು, ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.