ಮಹದಾಯಿ ಯೋಜನೆ ಶೀಘ್ರ ಅನುಷ್ಠಾನಕ್ಕೆ ಮನವಿ

(ಸಂಜೆವಾಣಿ ವಾರ್ತೆ)
ನವಲಗುಂದ,ನ26 : ಮಹದಾಯಿ, ಕಳಸಾ ಬಂಡೂರಿ, ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಲಪ್ರಭಾ, ಮಹದಾಯಿ, ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ, ಪಕ್ಷಾತೀತ ರೈತ ಹೋರಾಟ ಸಮಿತಿ ಸದಸ್ಯರು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.
ಯೋಜನೆ ಅನುಷ್ಠಾನಗೊಳಿಸುವಂತೆ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಒಂದು ತಿಂಗಳೊಳಗೆ ಟೆಂಡರ್ ಕರೆದು ಕಾಮಗಾರಿ ಆರಂಭಿಸ ಬೇಕು ಎಂದು ಆಗ್ರಹಿಸಿದರು.
ಯೋಜನೆ ಜಾರಿಗೆ ವಿಳಂಬ ಮಾಡುತ್ತಿ ರುವುದರಿಂದ ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ. ನೀರಿನ ವಿಷಯ ದಲ್ಲಿ ರಾಜಕೀಯ ಮಾಡದೆ ಕಾನೂನಾತ್ಮಕ ಅಡೆತಡೆಗಳನ್ನು ನಿವಾರಿಸಬೇಕು' ಎಂದು ರೈತ ಮುಖಂಡ ಸುಭಾಷಚಂದ್ರಗೌಡ ಪಾಟೀಲ ಒತ್ತಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಚಿವರು, ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ’ ಎಂದು ಎಚ್ಚರಿಸಿದರು.
ಬರ ಆವರಿಸಿದ್ದು, ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಕೂಡಲೇ ಬರ ಪರಿಹಾರ ಹಣ, ಬೆಳೆ ವಿಮೆ ಬಿಡುಗಡೆ ಮಾಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು' ಎಂದು ಆಗ್ರಹಿಸಿದರು. ಮನವಿ ಪತ್ರ ಸ್ವೀಕರಿಸಿ ಕೇಂದ್ರ ಸಚಿವ ಪ್ರಲ್ದಾದ ಜೋಶಿ ಮಾತನಾಡಿ,ಯೋಜನೆ ಅನುಷ್ಠಾನದ ಕುರಿತು ಈಗಾಗಲೇ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರೊಂದಿಗೆ ಚರ್ಚಿಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದು, ಎಲ್ಲ ಅಡೆತಡೆಗಳನ್ನು ನಿವಾರಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ತಿಳಿಸಿದರು.

ಎಸ್.ಬಿ. ಪಾಟೀಲ, ಬಸನಗೌಡ ಹುಣಸಿಕಟ್ಟೆ, ಮಲ್ಲೇಶ್ ಉಪ್ಪಾರ, ಗೋವಿಂದರೆಡ್ಡಿ ಮೊರಬದ, ಗಂಗಪ್ಪ ಸಂಗಟಿ, ಮಲ್ಲಪ್ಪ ಬಸಗೊಣ್ಣೆವರ್, ಮುರಾಗೆಪ್ಪಾ ಪಲ್ಲೆದ್, ಭಗವಂತಪ್ಪ ಪುಟ್ಟಣ್ಣವರ್, ಶಿವಣ್ಣ ಹುಬಳ್ಳಿ ಇದ್ದರು.