ಮಹಾದೇವಪ್ಪ ಕಡೇಚೂರ ಅಭಿನಂದನಾ ಸಮಾರಂಭಕ್ಕೆ ವ್ಯಾಪಕ ಸಿದ್ಧತೆಜು.24ರಂದು ‘ಅನನ್ಯ ಮಹಾದೇವ’ ಅಭಿನಂದನಾ ಗ್ರಂಥ ಬಿಡುಗಡೆ

ಕಲಬುರಗಿ:ಜು.21: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಹೈದರಾಬಾದ್ ಸಂಸ್ಥಾನ ವಿಮೋಚನಾ ಹೋರಾಟಗಾರ ಮಹಾದೇವಪ್ಪ ಕಡೇಚೂರ ಅವರ ಗೌರವಾರ್ಥ ಇದೇ ಜುಲೈ 24ರಂದು ಬೆಳಗ್ಗೆ 11ಕ್ಕೆ ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ‘ಅನನ್ಯ ಮಹಾದೇವ’ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ನಡೆಯಲಿದೆ.
ಈ ಕುರಿತು ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಅದೇ ದಿನದ ಸಮಾರಂಭದಲ್ಲಿ ಮಹಾದೇವಪ್ಪ ಕಡೇಚೂರ ಅವರು ಬರೆದಿರುವ ‘ಹೈದರಾಬಾದ್ ಸಂಸ್ಥಾನ ವಿಮೋಚನಾ ಹೋರಾಟದ ದಿಗ್ಗಜರು’ ಕೃತಿ ಸಹ ಲೋಕಾರ್ಪಣೆಗೊಳ್ಳಲಿದೆ ಎಂದು ವಿವರಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಮಾರಂಭ ಉದ್ಘಾಟಿಸಲಿದ್ದು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಸುನಿಲ್ ಕುಮಾರ್ ಹಾಗೂ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಅವರು ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದರು.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಬಸವರಾಜ ಪಾಟೀಲ್ ಸೇಡಂ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್, ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ, ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್ ಕುಮಾರ್ ಹೊಸಮನಿ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಲಬುರಗಿಯ ಸರಕಾರಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ.ಕಲ್ಯಾಣರಾವ್ ಜಿ. ಪಾಟೀಲ್ ಗ್ರಂಥಗಳ ಪರಿಚಯ ಮಾಡಿಕೊಡಲಿದ್ದಾರೆ. ಗ್ರಂಥ ಸಂಪಾದಕರಾದ ಡಾ.ಸದಾನಂದ ಪೆರ್ಲ, ಡಾ.ಚಿ.ಸಿ.ನಿಂಗಣ್ಣ ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ ಎಂದು ಮಹಾದೇವಪ್ಪ ಕಡೇಚೂರ ಅಭಿನಂದನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮಾಲೀಕಯ್ಯ ಗುತ್ತೇದಾರ್ ಮಾಹಿತಿ ನೀಡಿದರು.
ಸಾಹಿತಿ ಡಾ.ಚಿ.ಸಿ.ನಿಂಗಣ್ಣ, ಡಾ.ಸದಾನಂದ ಪೆರ್ಲ ಮಾತನಾಡಿದರು‌.
ಉದ್ಯಮಿ ವೆಂಕಟೇಶ ಕಡೇಚೂರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.