ಮಹಾನಗರ ಪಾಲಿಕೆಯ ವ್ಯಾಪ್ತಿಯ ಉದ್ದಿಮೆದಾರು ಕಡ್ಡಾಯವಾಗಿ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸಲು ಸೂಚನೆ

ಕಲಬುರಗಿ:ಏ.18:ಕರ್ನಾಟಕ ಸರ್ಕಾರದ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯದ ದಿನಾಂಕ: 26-02-2024ರ ಅಧಿಸೂಚನೆಯನ್ವಯ ಕಲಬುರಗಿ ಮಹಾನಗರಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರು, ವ್ಯಾಪಾರಸ್ಥರು ಮತ್ತು ಸಂಬಂಧಪಟ್ಟ ಸಾರ್ವಜನಿಕರು ಕಡ್ಡಾಯವಾಗಿ ತಮ್ಮ ನಾಮಫಲಕಗಳ ಮೇಲ್ಭಾಗದಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸಬೇಕೆಂದು ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾದ ಭವನೇಶ ದೇವಿದಾಸ್ ಪಾಟೀಲ ಅವರು ತಿಳಿಸಿದ್ದಾರೆ.

    ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‍ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು,  ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‍ಗಳು ಮುಂತಾದವುಗಳು ತಮ್ಮ ನಾಮಫಲಕಗಳ ಮೇಲ್ಭಾಗದಲ್ಲಿ ಶೇ 60 ರಷ್ಟು  ಕನ್ನಡ ಭಾಷೆಯನ್ನು ಪ್ರದರ್ಶಿಸಬೇಕೆಂದು ಸರ್ಕಾರದ ಆದೇಶವಿರುತ್ತದೆ. 
 ಅದೇ ರೀತಿ  ಕಲಬುರಗಿ ನಗರದ ಹೋಟೇಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಸಾರ್ವಜನಿಕರಿಗಾಗಿ ಕಡ್ಡಾಯವಾಗಿ ಶೌಚಾಲಯ ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು  ಕಲಬುರಗಿ ನಗರದ  ಸಾರ್ವಜನಿಕರು ಹಾಗೂ ಉದ್ದಿಮೆದಾರರಿಗೆ  ಅವರು ತಿಳಿಸಿದ್ದಾರೆ.