ಮೈಸೂರು,ಜು.೫- ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್‌ಗಳು ಹಾಗೂ ಸಿಬ್ಬಂದಿ ಮೂಲಕ ರೋಗಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಸರ್ಕಾರಿ ಮಹಿಳಾ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೋಮಲಾ ಅವರನ್ನು ಅಮಾನತು ಮಾಡಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ.
ಕರ್ತವ್ಯಲೋಪ, ದುರ್ನಡತೆ ಆರೋಪದ ಬಗ್ಗೆ ಶಿಸ್ತು ಕ್ರಮ ಬಾಕಿಯಿರಿಸಿ, ಈ ತಕ್ಷಣದಿಂದ ಅಮಾನತು ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.
ಲಂಚ ಕೊಟ್ಟರೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿತ್ತು ಎಂಬ ಆರೋಪ ಆಸ್ಪತ್ರೆ ಮೇಲೆ ಕೇಳಿ ಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ಈ ಸಂಬಂಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ, ತನಿಖೆ ಕೈಗೊಂಡು ವರದಿ ನೀಡುವಂತೆ ಆರೋಗ್ಯ ಇಲಾಖೆ ಆಯುಕ್ತರು ಸೂಚನೆ ನೀಡಿದ್ದರು. ತನಿಖಾ ವರದಿಯನ್ನು ಆಯುಕ್ತರಿಗೆ ಕಳುಹಿಸಲಾಗಿತ್ತು. ವರದಿ ಆಧಾರದ ಮೇಲೆ ವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ
ಇದೇ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಹೆಚ್‌ಒ ಡಾ. ಕೆ. ಎಚ್. ಪ್ರಸಾದ್, ಶಾಂತಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೋಮಲಾ ಅವರು ರೋಗಿಗಳಿಂದ ಹಣ ಪಡೆಯುತ್ತಿದ್ದರು ಎಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗಿದೆ. ಇದರ ಬಗ್ಗೆ ರಾಜ್ಯ ಆಯುಕ್ತರಿಗೆ ವರದಿ ನೀಡಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ ಎಂದಿದ್ದಾರೆ.