ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಿರಿ

ಕೋಲಾರ, ಜು.೨೦- ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿತಿಂಗಳು ರೂ.೨೦೦೦ ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ದಿನಾಂಕ:೨೦.೦೭.೨೦೨೩ ರಿಂದ ಕೋಲಾರ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹಫಲಾನುಭವಿಗಳು ಈ ಕೆಳಕಂಡ ವಿವರಗಳಂತೆ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಅಕ್ರಮ್ ಪಾಷಾ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ನೋಂದಣಿ ಜು,೨೦ ರಿಂದ ಆರಂಭಿಸಲಾಗುವುದು. ಈಗಾಗಲೇ ತಿಳಿಸಿರುವಂತೆ ಪಡಿತರಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರತಕ್ಕದ್ದಲ್ಲ.ಫಲಾನುಭವಿಯ ನೋಂದಣಿಯನ್ನು ಎರಡು ವಿಧಾನದಿಂದ ಮಾಡಿಸಬಹುದಾಗಿದೆ. ಮೊದಲನೆಯದಾಗಿ ಈಗಾಗಲೇ ರೇಷನ್ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು SಒS ಮೂಲಕ ತಿಳಿಸಲಾಗುವುದು. ಗ್ರಾಮಾಂತರ ಪ್ರದೇಶದಲ್ಲಿ ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್ ವಾರ್ಡ್ ಕಚೇರಿ ಮತ್ತು ಸ್ಮಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು ಕೇಂದ್ರವಾಗಿರುತ್ತದೆ.
ಎರಡನೇಯದಾಗಿ ಪರ್ಯಾಯವಾಗಿ “ಪ್ರಜಾಪ್ರತಿನಿಧಿ’ (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೊಂದಾಯಿಸಿಕೊಳ್ಳಬಹುದು. ಪ್ರತಿಫಲಾನುಭವಿಯ ನೋಂದಣಿಗೆ ನಿಗದಿಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು ೧೯೦೨ ಗೆ ಕಾಲ್ ಮಾಡಿ ಅಥವಾ ೮೧೪೭೫೦೦೫೦೦ ನಂಬರ್ ಗೆ SಒS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.
ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ- ಒನ್,ಬಾಪೂಜಿಕೇಂದ್ರ, ಕರ್ನಾಟಕ-ಒನ್, ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ ೫ ರಿಂದ ೭ ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿ ಕೊಳ್ಳಬಹುದಾಗಿದೆ.