
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೩೧; ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸರ್ಕಾರ ಅತಿದೊಡ್ಡ ಖಾತ್ರಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದೆ. ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ನಗರದ ತರಾಸು ರಂಗಮಂದಿರಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಮೈಸೂರಿನಲ್ಲಿ ನಡೆದ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮದ ನೇರ ಪ್ರಸಾರ ಹಾಗೂ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿ, ಅವರು ಮಾತನಾಡಿದರು. ಈ ಹಿಂದೆ ಜಾರಿಗೊಳಿಸಿದ, ಮಹಿಳೆಯರು ಉಚಿತವಾಗಿ ಬಸ್‍ಗಳಲ್ಲಿ ಪ್ರಯಾಣಿಸುವ “ಶಕ್ತಿ” ಯೋಜನೆಗೆ ಉತ್ತಮ ಸ್ಪಂದನೆ ದೊರೆತಿದೆ. ಮಹಿಳೆಯರ ಬಸ್ ಪ್ರಯಾಣದಿಂದಾಗಿ ಸದಾ ನಷ್ಟದಿಂದ ಬಳಲುತ್ತಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಲಾಭದತ್ತ ಮುಖ ಮಾಡಲು ಯೋಜನೆ ಕಾರಣವಾಗಿದೆ. ಇದೀಗ ನಮ್ಮ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಮಹಿಳೆಯರ ಸಬಲೀಕರಣಕ್ಕೆ ಈ ಯೋಜನೆ ಪೂರಕವಾಗಿದೆ. ಗೃಹಲಕ್ಷ್ಮೀ ಯೋಜನೆ ನೊಂದಣಿಗೆ ಯಾವುದೇ ಕಾಲಮಿತಿ ಇಲ್ಲ. ಅರ್ಹರು ಈಗಲೂ ಅರ್ಜಿ ಸಲ್ಲಿಸುವುದರ ಮೂಲಕ ಯೋಜನೆಯ ಲಾಭ ಪಡೆಯಲು ನೋಂದಾಯಿಸಿಕೊಳ್ಳಬಹುದು. ಈ ಹಿಂದೆ 2014 ರಿಂದ 2018 ವರೆಗೆ ಅಧಿಕಾರ ನಡೆಸಿದ ನಮ್ಮ ಪಕ್ಷದ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ 168 ಭರವಸೆಗಳನ್ನು ಈಡೇರಿಸಿದ್ದು ಮಾತ್ರವಲ್ಲದೆ, ಇನ್ನೂ ಹಲವಾರು ಯೋಜನೆ ಜಾರಿಗೊಳಿಸಿತ್ತು. ಈ ಬಾರಿಯೂ ಪ್ರಣಾಳಿಕೆಯಲ್ಲಿ ನೀಡಿದ ಅಷ್ಟು ಭರವಸೆಗಳನ್ನು ಈಡೇರಿಸಲಾಗುವುದು. ಈಗಾಗಲೆ ನಾವು ನೀಡಿದ ಗ್ಯಾರಂಟಿ ಭರವಸೆಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಜನರ ಕಲ್ಯಾಣಕ್ಕೆ ನೆರವಾಗಿವೆ ಎಂದರು.ಚಿತ್ರದುರ್ಗ ಜಿಲ್ಲೆಯ ಜನತೆಯ ಪ್ರಮುಖ ಭೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಈಗಾಗಲೇ ಚಿತ್ರದುರ್ಗ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ಸ್ಥಾಪನೆಗೆ ಮುನ್ನಡಿ ಬರೆಯಲಾಗಿದೆ. ಪ್ರಸಕ್ತ ವರ್ಷದಿಂದಲೇ ವೈದ್ಯಕೀಯ ಕಾಲೇಜು ಆರಂಭವಾಗಿಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದ 1.10 ಕೋಟಿ ಕುಟುಂಬಗಳ ಯಜಮಾನಿಗೆ ಪ್ರತಿ ತಿಂಗಳು ರೂ.2000 ನೇರವಾಗಿ ಖಾತೆ ಜಮೆ ಮಾಡಲಾಗುವುದು. ಜಿಲ್ಲೆಯಲ್ಲಿ ಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ಮಹಿಳೆಯರು ಇದರ ಲಾಭಗಳನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಮಾತನಾಡಿ ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ ಒಟ್ಟು 3.54 ಲಕ್ಷ ಮಹಿಳೆಯರು ನೊಂದಣಿ ಮಾಡಿಸಿದ್ದು, ಫಲಾನುಭವಿಗಳ ನೋಂದಣಿಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲೇ 2ನೇ ಸ್ಥಾನದಲ್ಲಿದೆ. ಮಹಿಳೆಯನ್ನು ಕೇಂದ್ರವಾಗಿಸಿಕೊಂಡು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರು ಆರ್ಥಿಕವಾಗಿ ಸಬಲರಾಗುವುದರೊಂದಿಗೆ ಸ್ವಾವಲಂಬಿ ಹಾಗೂ ಸ್ವಾಭಿಮಾನದ ಜೀವನ ಕಟ್ಟಿಕೊಳ್ಳಬೇಕು. ಮಹಿಳೆಯರು ಸ್ವಂತ ನಿರ್ಧಾರಗಳನ್ನು ಕೈಗೊಳ್ಳುವ ಮನೋಭಾವ ರೂಢಿಸಿಕೊಳ್ಳಬೇಕು, ಜೀವನದಲ್ಲಿ ಅಭಿವೃದ್ಧಿ ಹೊಂದಬೇಕು ಎಂದರು.ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ ಮಾತನಾಡಿ ಸರ್ಕಾರ ಘೋಷಿಸಿದ 5 ಖಾತ್ರಿ ಯೋಜನೆ ಪೈಕಿ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಈಗ ಗೃಹಲಕ್ಷ್ಮಿ ಸೇರಿದಂತೆ ನಾಲ್ಕು ಖಾತ್ರಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ 100 ದಿನದ ಒಳಗಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಗೃಹಲಕ್ಷ್ಮೀ ಯೋಜನೆ ಅಧಿಕೃತವಾಗಿ ಚಾಲನೆ ದೊರೆತಿದ್ದು, ಜಿಲ್ಲೆಯ ಎಲ್ಲ 189 ಗ್ರಾಮ ಪಂಚಾಯತಿಗಳಲ್ಲಿಯೂ ಮೈಸೂರಿನ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಿದ್ದಾರೆ. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಗೃಹಲಕ್ಷ್ಮೀ ಯೋಜನೆಯಡಿ ಸುಧಾ ಸಿ.ಕೆ. ಪುರ, ಮಂಜುಳಾ ಗಾರೆಹಟ್ಟಿ, ನಸ್ರಿನ್ ತಾಜ್ ಚಿತ್ರದುರ್ಗ, ಪಾಲಮ್ಮ ಸಿ.ಕೆ. ಪುರ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಮಂಜೂರಾತಿ ಆದೇಶ ಪತ್ರ ವಿತರಿಸಿದರು.