
ಶಿವಮೊಗ್ಗ.ಮಾ.೧೯; ಮಹಿಳೆಯರ ಸ್ವಾವಲಂಬಿ ಬದುಕಿಗೆ ಕೌಶಲ್ಯ ಅಭಿವೃದ್ಧಿ ಇಲಾಖೆಯು ಊರುಗೋಲು ಆಗಿದ್ದು, ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಸದುಪಯೋಗ ಪಡಿಸಿಕೊಳ್ಳುವಲ್ಲಿ ಶಿವಮೊಗ್ಗ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಅನುಕೂಲ ಪಡೆದುಕೊಂಡಿದ್ದು, ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಯು ಉತ್ತಮ ಸ್ಥಾನದಲ್ಲಿದೆ ಎಂದು ಶಿವಮೊಗ್ಗ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮೂಕಪ್ಪ ಕರಭೀಮಣ್ಣನವರ್ ಹೇಳಿದರು.ನಗರದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾಡಳಿತ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆ, ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಂದಿನ ವರ್ಷಗಳಲ್ಲಿಯೂ ಶಿವಮೊಗ್ಗ ಜನರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲ ಯೋಜನೆಗಳ ಆರ್ಥಿಕ ಸೌಲಭ್ಯಗಳನ್ನು ಎಲ್ಲರೂ ಪಡೆದುಕೊಳ್ಳಬೇಕು. ಆರ್ಥಿಕ ಸೌಲಭ್ಯಗಳ ಪರಿಣಾಮಕಾರಿ ಬಳಕೆಯಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು. ಉದ್ಯಮ ಕ್ಷೇತ್ರದಲ್ಲಿಯೂ ಮಹಿಳೆಯರು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಧಿಕಾರಿ ಎಚ್.ಎಂ.ಸುರೇಶ್ ಮಾತನಾಡಿ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರು ಯಶಸ್ಸು ಸಾಧಿಸುತ್ತಿದ್ದು, ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದರೆ ಇನ್ನಷ್ಟು ಜನರಿಗೆ ಸ್ಫೂರ್ತಿ ಸಿಗುತ್ತದೆ. ಮಹಿಳೆಯರು ಸಾಧಕರ ಜೀವನಗಾಥೆ ಅರಿತುಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಹೇಳಿದರು.